2019 ಲೋಕಸಭಾ ಚುನಾವಣೆ: ಪುಣೆಯಿಂದ ಮಾಧುರಿ ದೀಕ್ಷಿತ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ?
0
ಡಿಸೆಂಬರ್ 07, 2018
ಮುಂಬೈ: 2019 ರ ಲೋಕಸಭಾ ಚುನಾವಣೆಯಲ್ಲಿ ಪುಣೆಯಿಂದ ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಅವರನ್ನು ಬಿಜೆಪಿ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂಬುದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ಜೂನ್ ತಿಂಗಳಲ್ಲಿ ಸಮರ್ಥನಾ ಸಂಪರ್ಕ ಅಭಿಯಾನದ ಅಂಗವಾಗಿ ಮಾಧುರಿ ದೀಕ್ಷಿತ್ ಅವರ ಮನೆಗೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ನರೇಂದ್ರ ಮೋದಿ ಸರ್ಕಾರದ ಸಾಧನೆಗಳನ್ನು ದೀಕ್ಷಿತ್ ಅವರೊಂದಿಗೆ ಹಂಚಿಕೊಂಡಿದ್ದರು.
ಪುಣೆ ಲೋಕಸಭಾ ಕ್ಷೇತ್ರದಲ್ಲಿನ ಬಿಜೆಪಿ ಅಭ್ಯರ್ಥಿಗಳ ಕಿರುಪಟ್ಟಿಯಲ್ಲಿ ಮಾಧುರಿ ದೀಕ್ಷಿತ್ ಅವರ ಹೆಸರು ಇರುವುದಾಗಿ ಹಿರಿಯ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.
ಮಾಧುರಿ ದೀಕ್ಷಿತ್ ಅವರಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡಿಕೆಯನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ. ಪುಣೆ ಲೋಕಸಭಾ ಕ್ಷೇತ್ರ ಅವರಿಗೆ ಉತ್ತಮವಾಗಿದೆ. ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಮಾಧುರಿ ದೀಕ್ಷಿತ್ ಅವರನ್ನು ಅಲ್ಲಿಂದ ಕಣಕ್ಕಿಳಿಸಲು ಗಂಭೀರವಾಗಿ ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಪುಣೆ ಕ್ಷೇತ್ರವನ್ನು ಬಿಜೆಪಿ ಕಸಿದುಕೊಂಡಿದೆ. ಈ ಕ್ಷೇತ್ರದಲ್ಲಿ ಅನಿಲ್ ಶಿರೊಳ್ ಸುಮಾರು 3 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.





