ಮುಂಬೈ: ಔರಂಗಬಾದ್ ವಿಮಾನ ನಿಲ್ದಾಣವನ್ನು ಛತ್ರಪತಿ ಸಂಭಾಜಿ ಮಹಾರಾಜ್ ಎಂದು ಮರುನಾಮಕರಣ ಮಾಡಲು ಮಹಾರಾಷ್ಟ್ರ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ.
ನಿನ್ನೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಔರಂಗಬಾದ್ ವಿಮಾನ ನಿಲ್ದಾಣಕ್ಕೆ ಛತ್ರಪತಿ ಶಿವಾಜಿ ಮಹಾರಾಜ್ ಅವರ ಪುತ್ರ ಸಂಭಾಜಿ ಮಹಾರಾಜ್ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಕೈಗಾರಿಕಾ ಸಚಿವ ಸುಭಾಶ್ ದೇಸಾಯಿ ಅವರು, ಮಹಾ ವಿಕಾಸ ಅಘಾಡಿ ಸರ್ಕಾರ ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲು ಬದ್ಧವಾಗಿದೆ ಎಂದರು.
ಔರಂಗಬಾದ್ ವಿಮಾನ ನಿಲ್ದಾಣಕ್ಕೆ ಛತ್ರಪತಿ ಸಂಭಾಜಿ ಮಹಾರಾಜ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಇದನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಒಪ್ಪಿಗೆಗಾಗಿ ಕಳುಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.





