ನವದೆಹಲಿ: ದೇಶಾದ್ಯಂತ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮೆಗಾ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.
ಕೊರೋನಾ ವೈರಸ್ ಲಾಕ್ ಡೌನ್ ಐದನೇ ಹಂತದಲ್ಲಿ ಕೇಂದ್ರ ಸರ್ಕಾರ ಸಡಿಲಿಕೆ ಮಾಡಿದೆಯಾದರೂ, ಇದರ ನಡುವೆಯೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆ ಕರೆದಿದ್ದಾರೆ. ಜೂನ್ 16 ಮತ್ತು 17 ಎರಡು ದಿನ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಯಲಿದೆ.
ಮತ್ತೊಂದು ಪ್ರಮುಖ ವಿಚಾರವೆಂದರೆ ಪ್ರಧಾನಿ ನರೇಂದ್ರ ಮೋದಿ ಅವರ ಈ ವಿಡಿಯೋ ಕಾನ್ಫರೆನ್ಸ್ ಸಭೆಯು ಬರೊಬ್ಬರಿ ಎರಡು ದಿನಗಳ ಕಾಲ ನಡೆಯಲಿದೆ. ಲಾಕ್‍ಡೌನ್ ಸಡಿಲಿಕೆ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ಕೊರೋನಾ ಸೋಂಕಿನ ಬಗ್ಗೆ ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ. ಮೊದಲನೇ ದಿನ ಅಂದರೆ ಜೂನ್ 16ರಂದು 21 ರಾಜ್ಯಗಳ ಮುಖ್ಯಮಂತ್ರಿಗಳು, ಎರಡನೇ ದಿನ ಜೂನ್ 17ರಂದು 15 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಸಭೆ ನಡೆಸಲಿದ್ದಾರೆ.


