ನವದೆಹಲಿ: ದೇಶದಲ್ಲಿ ಕೊರೋನಾ ರಣಕೇಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 9,996 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 286 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.
ನಿನ್ನೆ ಒಂದೇ ದಿನ ಮಹಾಮಾರಿ ವೈರಸ್'ಗೆ ಬರೋಬ್ಬರಿ 357 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 8,102ಕ್ಕೆ ಏರಿಕೆಯಾಗಿದೆ. ಈ ಮಧ್ಯೆ 2,86,579 ಲಕ್ಷ ಸೋಂಕಿತರ ಪೈಕಿ 141029 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ ದೇಶದಲ್ಲಿನ್ನೂ 137448 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
ಏತನ್ಮಧ್ಯೆ ಮಹಾಮಾರಿ ಕೊರೋನಾದಿಂದ ಅಕ್ಷರಶಃ ಕಂಗಾಲಾಗಿರುವ ಮಹಾರಾಷ್ಟ್ರದಲ್ಲಿ ಬುಧವಾರ ಮತ್ತೆ 3254 ಹೊಸದಾಗಿ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ಮಹಾರಾಷ್ಟ್ರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 94,041ಕ್ಕೆ ಏರಿಕೆಯಾಗಿದೆ. ಅಲ್ಲದೆ ಒಂದೇ ದಿನ 149 ಮಂದಿ ಸಾವನ್ನಪ್ಪಿದ್ದು, ಈ ವ್ಯಾಧಿಗೆ ಮಹಾರಾಷ್ಟ್ರದಲ್ಲಿ ಈವರೆಗೆ 3438 ಮಂದಿ ಬಲಿಯಾದಂತಾಗಿದೆ.


