ಕಾಸರಗೋಡು: ಕಾಸರಗೋಡು ಜಿಲ್ಲೆಯ ಮಲೆನಾಡಿನ ಪ್ರಧಾನ ಆಶ್ರಯ ಕೇಂದ್ರವಾಗಿರುವ ವೆಳ್ಳರಿಕುಂಡ್ ತಾಲೂಕು ಆಸ್ಪತ್ರೆಯಲ್ಲಿ ಅಗತ್ಯವಿರುವ ಎಲ್ಲ ಅತ್ಯಾಧುನಿಕ ಸೌಲಭ್ಯಗಳನ್ನು ಶೀಘ್ರದಲ್ಲೇ ಏರ್ಪಡಿಸಲಾಗುವುದು ಎಂದು ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಟೀಚರ್ ತಿಳಿಸಿರುವರು.
ಎಂಡೋಸಲ್ಫಾನ್ ಪ್ಯಾಕೇಜ್ ನಲ್ಲಿ ಅಳವಡಿಸಿ ನಬಾರ್ಡ್ ನ ಆರ್.ಐ.ಡಿ.ಎಫ್ ನಿಧಿಯಲ್ಲಿ ನಿರ್ಮಿಸಿದ ಆಸ್ಪತ್ರೆಯ ನೂತನ ಕಟ್ಟಡವನ್ನು ವೀಡಿಯೋ ಕಾನ್ ಫೆರೆನ್ಸ್ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಈ ಆಸ್ಪತ್ರೆಯಲ್ಲಿ 6 ತಿಂಗಳ ಅವಧಿಯಲ್ಲಿ ಹೆರಿಗೆ ವಿಭಾಗವನ್ನು ಆರಂಭಿಸಲಾಗುವುದು ಎಂದವರು ನುಡಿದರು.
ರಾಜ್ಯ ಕಂದಾಯ ಸಚಿವ ಇ.ಚಂದ್ರಶೇಖರನ್ ಅಧ್ಯಕ್ಷತೆ ವಹಿಸಿದ್ದರು. ಸಂಸದ ರಾಜ್ ಮೋಹನ್ ಉಣ್ಣಿತ್ತಾನ್, ಕಾಸರಗೋಡು ಜಿಲ್ಲಾ ಪಂಚಾಯತ್ ಅಧ್ಯಕ್ಷ ಎ.ಜಿ.ಸಿ.ಬಶೀರ್, ಮಾಜಿ ಸಂಸದ ಪಿ.ಕರುಣಾಕರನ್, ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್, ಕಳ್ಳಾರ್ ಗ್ರಾಮಪಂಚಾಯತ್ ಅಧ್ಯಕ್ಷೆ ತ್ರೇಸ್ಯಾಮ್ಮ ಜೋಸೆಫ್, ಕೋಡೋಂ-ಬೇಳೂರು ಗ್ರಾಮಪಂಚಾಯತ್ ಅಧ್ಯಕ್ಷ ಸಿ.ಕುಂಞÂ್ಞ ಕಣ್ಣನ್, ಬಳಾಲ್ ಗ್ರಾಮಪಂಚಾಯತ್ ಅಧ್ಯಕ್ಷೆ ಎಂ.ರಾಧಾಮಣಿ, ಕಾಸರಗೋಡು ಡಿ.ಪಿ.ಎಂ.ರಾಮನ್ ಸ್ವಾತಿ ವಾಮನ್ ಮೊದಲಾದವರು ಉಪಸ್ಥಿತರಿದ್ದರು. ಪರಪ್ಪ ಬ್ಲಾಕ್ ಪಂಚಾಯತ್ ಅಧ್ಯಕ್ಷ ಪಿ.ರಾಜನ್ ಸ್ವಾಗತಿಸಿದರು. ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಸುಕು ವಂದಿಸಿದರು.


