ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಮಿತಿ ಮೀರುತ್ತಿರುವ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತುರ್ತುಸಭೆ ನಡೆಸಿದರು. ದೆಹಲಿಯಲ್ಲಿನ ಕೊವಿಡ್-19 ಪರಿಸ್ಥಿತಿ ಕುರಿತು ನಾಯಕರು ಮತ್ತು ಅಧಿಕಾರಿಗಳ ಜೊತೆಗೆ ಚರ್ಚಿಸಲಾಯಿತು.
ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆರೋಗ್ಯ ಸಚಿವ ಹರ್ಷವರ್ಧನ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.
ನವದೆಹಲಿಯಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ರೋಗಿಗಳಿಗೆ ಅಗತ್ಯ ಬೆಡ್ ಮತ್ತು ತುರ್ತು ನಿಗಾ ಘಟಕಗಳ ಅವ್ಯವಸ್ಥೆಯ ಆತಂಕ ಮತ್ತೊಮ್ಮೆ ಎದುರಾಗಿದೆ. ವೆಂಟಿಲೇಟರ್ ಸಹಿತ ಐಸಿಯು ವಾರ್ಡ್ ಗಳ ಸಂಖ್ಯೆ ಈ ಹಿಂದಿಗಿಂತಲೂ ತೀರಾ ಕಡಿಮೆಯಾಗಿದೆ.
ಶೇ.80ರಷ್ಟು ಖಾಸಗಿ ಆಸ್ಪತ್ರೆ ಬೆಡ್ ಮೀಸಲು:
ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಹೆಚ್ಚಾಗಿರುವ ಹಿನ್ನೆಲೆ ಕಳೆದ ವಾರ ದೆಹಲಿ ಹೈಕೋರ್ಟ್ ಮಹತ್ವದ ಆದೇಶವನ್ನು ಹೊರಡಿಸಿತ್ತು. ನವದೆಹಲಿಯ 33 ಖಾಸಗಿ ಆಸ್ಪತ್ರೆಗಳಲ್ಲಿನ ಶೇ.80ರಷ್ಟು ಬೆಡ್ ಗಳನ್ನು ಕೊರೊನಾವೈರಸ್ ರೋಗಿಗಳಿಗೆ ಮೀಸಲು ಇರಿಸುವಂತೆ ಆದೇಶಿಸಿತ್ತು.
ನವದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲೇ 3235 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 4,85,405 ಏರಿಕೆಯಾಗಿದೆ. ಒಂದೇ ದಿನದಲ್ಲಿ 95 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 7614ಕ್ಕೆ ಏರಿಕೆಯಾಗಿದೆ. ಈವರೆಗೂ 4,37,801 ಸೋಂಕಿತರು ಗುಣಮುಖರಾಗಿದ್ದಾರೆ.





