ನವದೆಹಲಿ: ದೇಶದಲ್ಲಿ ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಗುರುವಾರ ಭಾರತದಲ್ಲಿ ಬರೋಬ್ಬರಿ 35,871 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದು ಈ ವರ್ಷದ ಅತಿ ಗರಿಷ್ಠ ಏಕದಿನದ ಪ್ರಕರಣವಾಗಿದೆ.
ಒಂದೇ ದಿನ ಮಹಾಮಾರಿ ವೈರಸ್ 172 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,59,216ಕ್ಕೆ ಏರಿಕೆಯಾಗಿದೆ.
ಈ ನಡುವೆ ಒಟ್ಟಾರೆ 1,14,74,605 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 17,741 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,10,63,025ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 2,52,364 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.
ಇನ್ನು ಭಾರತದಲ್ಲಿ ಒಂದೇ ದಿನ 10,63,379 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 23,03,13,163 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.
ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 3,71,43,255 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.


