ನವದೆಹಲಿ: ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ನಿರ್ವಹಣೆ ಹೊಣೆಯನ್ನು ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿಗೆ ಒಪ್ಪಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ.
ದೇಗುಲದ ನಿರ್ವಹಣೆಯ ಹೊಣೆಯನ್ನು ರಾಮಚಂದ್ರಾಪುರ ಮಠಕ್ಕೆ ಒಪ್ಪಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ರದ್ದುಪಡಿಸಿ ರಾಜ್ಯ ಹೈಕೋರ್ಟ್ 2018ರಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಯ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ಪೀಠ ಸೋಮವಾರ ತೀರ್ಪು ಪ್ರಕಟಿಸಿದೆ.
ನಿವೃತ್ತ ನ್ಯಾಯಮೂರ್ತಿ ಬಿ.ಎನ್.ಶ್ರೀಕೃಷ್ಣ ಅವರಿಗೆ ಸಮಿತಿಯ ನೇತೃತ್ವ ವಹಿಸಿ ನೇಮಕ ಮಾಡುವ ಮೂಲಕ ಪ್ರಕರಣಕ್ಕೆ ಮಧ್ಯಂತರ ಪರಿಹಾರ ಸೂಚಿಸಲಾಗಿದೆ.
ದಕ್ಷಿಣ ಕಾಶಿ ಎಂದೇ ಹೆಸರಾಗಿರುವ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ಹೊಣೆಯನ್ನು ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ 12 ವರ್ಷಗಳ ಹಿಂದೆ ರಾಮಚಂದ್ರಾಪುರ ಮಠಕ್ಕೆ ವಹಿಸಿತ್ತು.
ಸಮಿತಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಕುಮಟಾದ ಸಹಾಯಕ ಆಯುಕ್ತರು, ಇಬ್ಬರು ತಜ್ಞರು ಹಾಗೂ ಇನ್ನಿಬ್ಬರು ಇರಲಿದ್ದಾರೆ.
15 ದಿನಗಳೊಳಗೆ ದೇವಸ್ಥಾನದ ಆಡಳಿತವನ್ನು ರಾಮಚಂದ್ರಾಪುರ ಮಠದಿಂದ ತನ್ನ ವಶಕ್ಕೆ ಪಡೆಯುವಂತೆಯೂ ಪೀಠವು ಸಮಿತಿಗೆ ಸೂಚಿಸಿದೆ.


