HEALTH TIPS

ವಿಶೇಷ ವರದಿ: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಮತ್ತಷ್ಟು ದುಬಾರಿ!

            ನವದೆಹಲಿ: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಹರಡುವಿಕೆ ಆತಂಕದ ನಡುವೆ ಕೊವ್ಯಾಕ್ಸಿನ್ ಮತ್ತು ಕೊವಿಶೀಲ್ಡ್ ಲಸಿಕೆ ಬೆಲೆಯನ್ನು ಹೆಚ್ಚಿಸುವುದಕ್ಕೆ ಸರ್ಕಾರ ಚಿಂತಿಸುತ್ತಿದೆ ಎಂದು ಸಿಎನ್ ಬಿಸಿ ಟಿವಿ-18 ವರದಿ ಮಾಡಿದೆ.


         ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನಿಕಾ ಸಂಶೋಧಿಸಿರುವ ಪುಣೆಯ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಲಸಿಕೆ. ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್ ಲಸಿಕೆಗಳು ಮತ್ತಷ್ಟು ದುಬಾರಿ ಆಗಲಿವೆ.

             ಒಂದು ಡೋಸ್ ಕೊವಿಶೀಲ್ಡ್ ಲಸಿಕೆಗೆ 205 ರೂಪಾಯಿ ಜೊತೆಗೆ ಶೇ.5ರಷ್ಟು ಜಿಎಸ್ ಟಿ ನಿಗದಿಗೊಳಿಸಲಾಗಿದೆ. ಅದೇ ರೀತಿ ಕೊವ್ಯಾಕ್ಸಿನ್ ಲಸಿಕೆಗೆ ಒಂದು ಡೋಸ್ ಪಡೆಯಲು 215 ರೂಪಾಯಿ ಜೊತೆ ಶೇ.5ರಷ್ಟು ಜಿಎಸ್ ಟಿ ನೀಡಬೇಕಾಗುತ್ತದೆ ಎಂದು ಮೂಲಗಳಿಂದ ತಿಳಿದು ಬಂದಿದೆ. 2021ರ ವರ್ಷಾಂತ್ಯದ ವೇಳೆಗೆ ಅರ್ಹ ಫಲಾನುಭವಿಗಳಿಗೆ ಲಸಿಕೆ ನೀಡುವುದಕ್ಕೆ ಸರ್ಕಾರದ ಸಿದ್ಧತೆ ಹೇಗಿದೆ. ಯಾವ ಕಂಪನಿಗಳಿಂದ ಎಷ್ಟು ಲಸಿಕೆ ಪೂರೈಕೆ ಆಗುತ್ತದೆ. ಎಷ್ಟು ಕಂಪನಿಗಳ ಲಸಿಕೆಗೆ ದೇಶದಲ್ಲಿ ಅನುಮೋದನೆ ನೀಡಲಾಗಿದೆ. ಇದರ ಹೊರತಾಗಿ ಈವರೆಗೂ ಎಷ್ಟು ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ಪ್ರಸ್ತುತ ಹೊಸ ಸೋಂಕಿತರು ಮತ್ತು ಗುಣಮುಖರ ಸಂಖ್ಯೆ ಹಾಗೂ ನಡುವಿನ ವ್ಯತ್ಯಾಸ ಎಷ್ಟಿದೆ ಎಂಬುದರ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ.

                             94 ಕೋಟಿ ಫಲಾನುಭವಿಗಳಿಗೆ ಲಸಿಕೆ ವಿತರಿಸುವ ಗುರಿ

          ಭಾರತದಲ್ಲಿ 2021ರ ಡಿಸೆಂಬರ್ ವೇಳೆಗೆ 94 ಕೋಟಿ ಅರ್ಹ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಮಾಡುವ ಗುರಿಯನ್ನು ಹೊಂದಲಾಗಿದೆ. ಆ ಮೂಲಕ ಕೊವಿಡ್-19 ಸೋಂಕು ನಿಯಂತ್ರಿಸುವ ಉದ್ದೇಶವನ್ನು ಹೊಂದಲಾಗಿದೆ. ಈ ನಿಟ್ಟಿನಲ್ಲಿ ಭಾರತೀಯ ಕಂಪನಿಗಳ ಜೊತೆಗೆ ಎರಡು ವಿದೇಶಿ ಕಂಪನಿಗಳ ಲಸಿಕೆಗೂ ದೇಶದಲ್ಲಿ ಅನುಮೋದನೆ ನೀಡಲಾಗಿದೆ. ವಿದೇಶಿ ಕಂಪನಿಗಳ ಲಸಿಕೆಯನ್ನು ಆಮದು ಮಾಡಿಕೊಳ್ಳುವುದಕ್ಕೂ ಕಾರ್ಯಯೋಚನೆ ರೂಪಿಲಾಗುತ್ತಿದೆ. ಅಷ್ಟಾಗಿಯೂ ಸರ್ಕಾರವು ನಿಗದಿತ ಗುರಿಯನ್ನು ತಲುಪುವುದಕ್ಕೆ ಸಾಧ್ಯವೇ ಎಂಬ ಅನುಮಾನಗಳು ಇತ್ತೀಚಿನ ಬೆಳವಣಿಗೆಳಿಂದ ಹುಟ್ಟಿಕೊಳ್ಳುತ್ತಿದೆ.

                         ಕೊವ್ಯಾಕ್ಸಿನ್ ಮತ್ತು ಕೊವಿಶೀಲ್ಡ್ ಲಸಿಕೆ ಪೂರೈಕೆ

             ದೇಶದಲ್ಲಿ ಮೊದಲು ಅನುಮೋದನೆ ಪಡೆದಿರುವ ಈ ಎರಡು ಲಸಿಕೆಗಳ ವಿತರಣೆ ಈಗಾಗಲೇ ನಡೆಯುತ್ತಿದೆ. ಡಿಸೆಂಬರ್ ವೇಳೆಗೆ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ 37 ಕೋಟಿ ಡೋಸ್ ಕೊವಿಶೀಲ್ಡ್ ಲಸಿಕೆ ಹಾಗೂ ಭಾರತ್ ಬಯೋಟೆಕ್ ಸಂಸ್ಥೆಯಿಂದ 28.5 ಕೋಟಿ ಡೋಸ್ ಕೊವ್ಯಾಕ್ಸಿನ್ ಲಸಿಕೆಯನ್ನು ಪೂರೈಸಲಾಗುವುದು ಎಂದು ಕಂಪನಿಗಳು ಸ್ಪಷ್ಟಪಡಿಸಿರುವ ಬಗ್ಗೆ ವರದಿಯಾಗಿದೆ.

                     40 ಕೋಟಿಗೂ ಅಧಿಕ ಜನರಿಗೆ ಕೊವಿಡ್-19 ಲಸಿಕೆ

         ದೇಶದಲ್ಲಿ ಕೊರೊನಾವೈರಸ್ ಲಸಿಕೆ ಅಭಿಯಾನ ಆರಂಭವಾಗಿ 183 ದಿನಗಳಲ್ಲಿ ಕಳೆದಿವೆ. ಈವರೆಗೂ 40 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಶನಿವಾರ ರಾತ್ರಿ 7 ಗಂಟೆ ವೇಳೆಗೆ 46,38,106 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಒಟ್ಟು 40,49,31,715 ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

                       ಕೊವಿಡ್-19 ನಿಯಂತ್ರಿಸಲು ಲಸಿಕೆ ವಿತರಣೆ ಅಭಿಯಾನ

         ಭಾರತದಲ್ಲಿ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ

18 ರಿಂದ 44 ವಯಸ್ಸಿನವರಿಗೆ ಲಸಿಕೆ ನೀಡಲು ಆದ್ಯತೆ

          ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. ಈ ಹಿನ್ನೆಲೆ 18 ರಿಂದ 44 ವರ್ಷದ ವಯೋಮಾನದವರಿಗೆ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಶನಿವಾರ ಒಂದೇ ದಿನ 18 ರಿಂದ 44 ವಯೋಮಾನದ 21,18,682 ಜನರಿಗೆ ಮೊದಲ ಡೋಸ್ ಹಾಗೂ 2,33,019 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದೇ ವಯೋಮಾನದ 12,40,07,069 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 48,50,858 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

                     ಭಾರತದಲ್ಲಿ ಎಷ್ಟು ಕಂಪನಿ ಲಸಿಕೆಗಳಿಗೆ ಅನುಮೋದನೆ?

          ಭಾರತದಲ್ಲಿ ಒಟ್ಟು ನಾಲ್ಕು ಕಂಪನಿಗಳ ಕೊರೊನಾವೈರಸ್ ಲಸಿಕೆಯ ವಿತರಣೆಗೆ ಅನುಮೋದನೆ ನೀಡಲಾಗಿದೆ. ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನಿಕಾ ಸಂಶೋಧಿಸಿರುವ ಪುಣೆಯ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಲಸಿಕೆ. ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್, ರಷ್ಯಾದಲ್ಲಿ ಸಂಶೋಧಿಸಿ ಭಾರತದ ರೆಡ್ಡೀಸ್ ಕಂಪನಿ ಜೊತೆಗಿನ ಸಹಭಾಗಿತ್ವದಲ್ಲಿ ಉತ್ಪಾದನೆ ಆಗುತ್ತಿರುವ ಸ್ಪುಟ್ನಿಕ್-ವಿ ಹಾಗೂ ಮಾಡೆರ್ನಾ ಲಸಿಕೆಯನ್ನು ವಿತರಿಸುವುದಕ್ಕೆ ಕೇಂದ್ರ ವೈದ್ಯಕೀಯ ಔಷಧೀಯ ನಿಯಂತ್ರಣ ಪ್ರಾಧಿಕಾರವು ಅನುಮೋದನೆ ನೀಡಿದೆ.

             ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಎಷ್ಟಿದೆ?

           ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41,157 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 518 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 42,004 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಇದುವರೆಗೂ 3,02,69,796 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 4,13,609 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 4,22,660 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

                  19 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾವೈರಸ್ ಪರೀಕ್ಷೆ

           ದೇಶದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ಸಂಖ್ಯೆ ಹೆಚ್ಚಾದಂತೆ ಸೋಂಕಿತ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 19,36,709 ಜನರ ಮಾದರಿ ಪರೀಕ್ಷೆಗೊಳಪಡಿಸಿದಾಗ 41,157 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ದೇಶದಲ್ಲಿ ಈವರೆಗೂ 44,39,58,663 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries