ನವದೆಹಲಿ: ಭಾರತದಲ್ಲಿ ಕೊರೊನಾೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಯ ಭೀತಿ ಸೃಷ್ಟಿಯಾಗಿದೆ. ಇದರ ಮಧ್ಯೆ ಶಾಲಾ-ಕಾಲೇಜುಗಳನ್ನು ಆರಂಭಿಸಬೇಕೇ ಬೇಡವೇ ಎಂಬುದರ ಚರ್ಚೆ ಜೋರಾಗಿ ನಡೆಯುತ್ತಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿಗೆ ಲಸಿಕೆ ಕಡ್ಡಾಯಗೊಳಿಸುವುದು ಅನಿವಾರ್ಯವಾಗಿದೆ.
ದೇಶದಲ್ಲಿ ಶೈಕ್ಷಣಿಕ ವಲಯದ ಪ್ರತಿಯೊಬ್ಬ ಸಿಬ್ಬಂದಿಯು ಕೊವಿಡ್-19 ಲಸಿಕೆ ಪಡೆದುಕೊಳ್ಳುವುದನ್ನು ಕಡ್ಡಾಯಗೊಳಿಸಬೇಕಿದೆ. ಈ ಯೋಜನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳು ಸರ್ಕಾರದೊಂದಿಗೆ ಕೈಜೋಡಿಸಬೇಕಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.
ಭಾರತದ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಒಟ್ಟು 75 ಲಕ್ಷ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. ಈ ಪೈಕಿ ಕೇವಲ ಶೇ.20ರಷ್ಟು ಶಿಕ್ಷಕರು ಮಾತ್ರ ಕೊರೊನಾವೈರಸ್ ಲಸಿಕೆ ಪಡೆದುಕೊಂಡಿದ್ದಾರೆ. ಈ ವಲಯದಲ್ಲಿ ಬಾಕಿ ಉಳಿದಿರುವ ಶಿಕ್ಷಕರಿಗೆ ಉಚಿತವಾಗಿ ಲಸಿಕೆ ಒದಗಿಸುವ ನಿಟ್ಟಿನಲ್ಲಿ ದೇಶದ ಖಾಸಗಿ ಆಸ್ಪತ್ರೆಗಳು, ಬಹುರಾಷ್ಟ್ರೀಯ ಕಂಪನಿಗಳು ಸಹಕಾರ ನೀಡಬೇಕಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಖಾಸಗಿ ಆಸ್ಪತ್ರೆ ಪ್ರತಿನಿಧಿಗಳು ಆರೋಗ್ಯ ಇಲಾಖೆ ಸಭೆ:
ದೇಶದಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳನ್ನು ಪುನಾರಂಭಿಸುವುದಕ್ಕೆ ಸಂಬಂಧಿಸಿದಂತೆ ಮಹತ್ವದ ಸಭೆ ಕರೆಯಲಾಗಿತ್ತು. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧಿಕಾರಿಗಳು ಮತ್ತು ಖಾಸಗಿ ಶಾಲೆಗಳ ಪ್ರತಿನಿಧಿಗಳ ನಡುವೆ ಕಳೆದ ವಾರ ಮಹತ್ವದ ಸಭೆ ನಡೆಯಿತು ಎಂದು ತಿಳಿದು ಬಂದಿದೆ. ಈ ಸಭೆಯಲ್ಲಿ ಶಾಲೆಗಳ ಪುನಾರಂಭಕ್ಕೆ ಸೂಕ್ತವಾದ ಮಾರ್ಗಸೂಚಿಗಳನ್ನು ರಚಿಸುವುದರ ಬಗ್ಗೆ ಚರ್ಚಿಸಲಾಗಿತ್ತು. ಇದರ ಜೊತೆಗೆ ಖಾಸಗಿ ಆಸ್ಪತ್ರೆಗಳಲ್ಲೂ ಶಿಕ್ಷಕರಿಗೆ ಉಚಿತವಾಗಿ ಲಸಿಕೆಯನ್ನು ಒದಗಿಸುವ ಕೆಲಸವಾಗಬೇಕು ಎಂದು ಸರ್ಕಾರ ಪ್ರಸ್ತಾಪಿಸಿತ್ತು.
"ಒಂದು ಬಾರಿ ಖಾಸಗಿ ಆಸ್ಪತ್ರೆಗಳು ಶಿಕ್ಷಕರಿಗೆ ಉಚಿತವಾಗಿ ಕೊರೊನಾವೈರಸ್ ಲಸಿಕೆಯ ವಿತರಣೆಯನ್ನು ಆರಂಭಿಸಬೇಕು. ತದನಂತರದಲ್ಲಿ ಈ ಕ್ರಮವನ್ನು ಬಹುಪಾಲು ಖಾಸಗಿ ಆಸ್ಪತ್ರೆಗಳೇ ಪಾಲನೆ ಮಾಡುತ್ತವೆ. ಇದರಿಂದ ಹೆಚ್ಚು ಹೆಚ್ಚು ಪ್ರಮಾಣದಲ್ಲಿ ಶಿಕ್ಷಕರಿಗೆ ಲಸಿಕೆ ಲಭ್ಯವಾಗುತ್ತದೆ. ಈ ರೀತಿಯಾದ ಸಲಹೆಗಳನ್ನು ಒಳಗೊಂಡಿರುವ ಸಂದೇಶವನ್ನು ಅಮೆಜಾನ್ ಸೇರಿದಂತೆ ಹಲವು ಬಹುರಾಷ್ಟ್ರೀಯ ಕಂಪನಿಗಳಿಗೆ ತಲುಪಿಸಲಾಗಿದೆ. ಶಿಕ್ಷಕರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ಒದಗಿಸುವ ನಿಟ್ಟಿನಲ್ಲಿ ಕಂಪನಿಗಳಿಂದ ನೆರವು ನೀಡುವಂತೆ ಮನವಿ ಮಾಡಿಕೊಳ್ಳಲಾಗಿದೆ," ಎಂದು ಅಸೋಸಿಯೇಷನ್ ಆಫ್ ಹೆಲ್ತ್‌ಕೇರ್ ಪ್ರೊವೈಡರ್ಸ್ ಆಫ್ ಇಂಡಿಯಾದ ಡಿಜಿ ಆಗಿರುವ ಡಾ. ಗಿರಿಧರ್ ಜ್ಞಾನಿ ಹೇಳಿದ್ದಾರೆ.
ಉದ್ಯೋಗಿಗಳ ಲಸಿಕೆ ವೆಚ್ಚದ ಬಗ್ಗೆ ಉಲ್ಲೇಖ:
ಕಳೆದ ಜುಲೈ 30ರ ಸುತ್ತೋಲೆಯಲ್ಲಿ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಉದ್ಯೋಗಿಗಳು ಮತ್ತು ಅವರ ಕುಟುಂಬಗಳನ್ನು ಹೊರತುಪಡಿಸಿ ಇತರ ವ್ಯಕ್ತಿಗಳಿಗೆ ಕೊವಿಡ್-19 ಲಸಿಕೆಗಾಗಿ ಖರ್ಚು ಮಾಡಿದ ಹಣವನ್ನು ಸಿಎಸ್‌ಆರ್ ವೆಚ್ಚವೆಂದು ಪರಿಗಣಿಸಲಾಗುವುದು ಎಂದು ಹೇಳಿತ್ತು. ಕೊವಿಡ್‌ಗಾಗಿ ಖರ್ಚು ಮಾಡುವುದನ್ನು ಸಿಎಸ್‌ಆರ್ ಚಟುವಟಿಕೆ ಎಂದು ಪರಿಗಣಿಸಲಾಗುವುದು ಎಂದು ಮಾರ್ಚ್‌ನಲ್ಲೇ ಹೇಳಲಾಗಿತ್ತು.
ಶಾಲೆಗಳ ಪುನಾರಂಭಕ್ಕೆ ಮುಂದಾದ ಹಲವು ರಾಜ್ಯಗಳು:
ದೇಶಾದ್ಯಂತ ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆ 2020ರ ಮಾರ್ಚ್ ತಿಂಗಳಿನಿಂದಲೂ ಶಾಲೆಗಳನ್ನು ಮುಚ್ಚಲಾಗಿದೆ. ಆದರೆ ಇತ್ತೀಚಿಗೆ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ, ಮಧ್ಯ ಪ್ರದೇಶ, ಬಿಹಾರ, ಒಡಿಶಾ ಸೇರಿದಂತೆ ಹಲವು ರಾಜ್ಯಗಳು ಪ್ರೌಢಶಾಲೆಗಳು ಮತ್ತು ಹಿರಿಯ ಪ್ರೌಢಶಾಲೆಗಳನ್ನು ಪುನಾರಂಭಿಸಸುವುದಕ್ಕೆ ತೀರ್ಮಾನಿಸಿದ್ದವು.
ದೇಶದಲ್ಲಿ ಇಳಿಮುಖವಾಯಿತು ಲಸಿಕೆ ವಿತರಣೆ ಪ್ರಮಾಣ:
ಕಳೆದ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನವನ್ನು ಆರಂಭಿಸಿ 206 ದಿನಗಳೇ ಕಳೆದಿದ್ದು, ಕಳೆದ 24 ಗಂಟೆಗಳಲ್ಲಿ 51,09,58,562 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಮಂಗಳವಾರದ ವೇಳೆಗೆ ಒಟ್ಟು 52,56,35,710 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಕೊರೊನಾವೈರಸ್ ಲಸಿಕೆಯ ಶೇ.75ರಷ್ಟು ಪ್ರಮಾಣವನ್ನು ಕೇಂದ್ರ ಸರ್ಕಾರವೇ ಕಂಪನಿಗಳಿಂದ ನೇರವಾಗಿ ಖರೀದಿಸುತ್ತದೆ. ಹೀಗೆ ಖರೀದಿಸಿದ ಲಸಿಕೆಯನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಸರಬರಾಜು ಮಾಡಲಾಗುತ್ತದೆ. ದೇಶದಲ್ಲಿ ಪ್ರತಿಯೊಬ್ಬರಿಗೆ ಕೊವಿಡ್-19 ಲಸಿಕೆ ಸಿಗಬೇಕು ಎನ್ನುವ ಉದ್ದೇಶದಿಂದ ಉಚಿತ ಲಸಿಕೆ ವಿತರಣೆ ಅಭಿಯಾನವನ್ನು ನಡೆಸಲಾಗುತ್ತಿದೆ.
ಭಾರತದಲ್ಲಿ ಕೊರೊನಾವೈರಸ್ ಲಸಿಕೆಯ ಲಭ್ಯತೆ:
2021ರ ಆಗಸ್ಟ್ 10ರ ಅಂಕಿ-ಅಂಶಗಳ ಪ್ರಕಾರ, 52,56,35,710 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.
ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ:
* ಪೂರೈಕೆಯಾದ ಲಸಿಕೆ ಪ್ರಮಾಣ - 52,56,35,710
* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 48,43,100
* ಬಳಕೆ ಆಗಿರುವ ಲಸಿಕೆ ಪ್ರಮಾಣ - 51,09,58,562
* ಕೊವಿಡ್-19 ಲಸಿಕೆಯ ಲಭ್ಯತೆ - 2,07,55,852





