HEALTH TIPS

ತೃತೀಯಲಿಂಗಿಗಳಿಗೆ ಕೊರೊನಾ ಲಸಿಕೆ; ಲೋಕಸಭೆಯಲ್ಲಿ ಕೇಂದ್ರದ ಮಾಹಿತಿ

                 ನವದೆಹಲಿ: ದೇಶದಲ್ಲಿ ಕೊರೊನಾ ಮೂರನೇ ಅಲೆ ಭೀತಿ ನಡುವೆ ಲಸಿಕಾ ವೇಗವನ್ನು ಹೆಚ್ಚಿಸಲಾಗಿದೆ. 18 ವರ್ಷ ಮೇಲ್ಪಟ್ಟ ಎಲ್ಲರಿಗೂ ತ್ವರಿತಗತಿಯಲ್ಲಿ ಲಸಿಕೆ ನೀಡಲಾಗುತ್ತಿದೆ.

         ಈ ನಡುವೆ ದೇಶದಲ್ಲಿ ತೃತೀಯಲಿಂಗಿಗಳಿಗೆ ಕೊರೊನಾ ಲಸಿಕೆ ನೀಡುವ ಸಂಬಂಧ ಲೋಕಸಭೆಯಲ್ಲಿ ಮಂಗಳವಾರ ಪ್ರಶ್ನೆಗಳು ಕೇಳಿಬಂದಿವೆ.

           45 ವರ್ಷ ಮೇಲ್ಪಟ್ಟ ತೃತೀಯ ಲಿಂಗಿಗಳಿಗೆ ಕೊರೊನಾ ಲಸಿಕೆ ನೀಡಿರುವ ಸಂಬಂಧ ಸರ್ಕಾರದ ಬಳಿ ಮಾಹಿತಿ ಲಭ್ಯವಿಲ್ಲ ಎಂದು ಸಾಮಾಜಿಕ ನ್ಯಾಯ ಸಚಿವಾಲಯ ಲೋಕಸಭೆಗೆ ಮಂಗಳವಾರ ಮಾಹಿತಿ ನೀಡಿದೆ.

          ಲೋಕಸಭೆಯಲ್ಲಿ ಡಿಎಂಕೆ ಮುಖಂಡ ಡಿಎಂ ಕಾತಿರ್ ಆನಂದ್, ದೇಶದಲ್ಲಿ ಎಷ್ಟು ತೃತೀಯ ಲಿಂಗಿಗಳಿಗೆ ಲಸಿಕೆ ನೀಡಲಾಗಿದೆ ಎಂಬ ಪ್ರಶ್ನೆ ಮುಂದಿಟ್ಟಿದದ್ದು, ಈ ಪ್ರಶ್ನೆಗೆ ಸಚಿವಾಲಯ ಉತ್ತರ ನೀಡಿದೆ.

          ತೃತೀಯ ಲಿಂಗಿಗಳಿಗೆ ಲಸಿಕೆ ತೆಗೆದುಕೊಳ್ಳಲು ಅನುವಾಗುವಂಥ ಪೂರಕ ವಾತಾವರಣ ಸೃಷ್ಟಿಯಾಗುವಂತೆ ನೋಡಿಕೊಳ್ಳಬೇಕೆಂದು ಎಲ್ಲಾ ರಾಜ್ಯಗಳಿಗೆ ಹಾಗು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಲಾಗಿದೆ. ಅವರಿಗೆ ಯಾವುದೇ ರೀತಿಯಲ್ಲೂ ತಾರತಮ್ಯ ಮಾಡಬಾರದು ಎಂದು ನಿರ್ದೇಶನ ನೀಡಲಾಗಿದೆ. ಅವರಿಗೆ ಲಸಿಕೆ ನೀಡುವ ಸಂಬಂಧ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಗೆ ಮನವಿ ಮಾಡಿರುವುದಾಗಿ ತಿಳಿಸಿದೆ.

ಲಸಿಕೆ ಪಡೆದುಕೊಂಡ ತೃತೀಯ ಲಿಂಗಿಗಳು ಅರ್ಜಿಯಲ್ಲಿ ಪುರುಷ, ಮಹಿಳೆ ಆಯ್ಕೆಯ ಪಟ್ಟಿಯಲ್ಲಿಯೂ ಹೆಸರು ನಮೂದಿಸುತ್ತಿದ್ದಾರೆ. ಹೀಗಾಗಿ ಲಸಿಕೆ ಪಡೆದವರ ಸಂಖ್ಯೆಯನ್ನು ಒಟ್ಟು ಮಾಡುವುದು ಸಾಧ್ಯವಾಗಿಲ್ಲ ಎಂದು ಸಚಿವಾಲಯ ತಿಳಿಸಿದೆ.

            ತೃತೀಯ ಲಿಂಗಿಗಳು ಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿದ್ದಾರೆ. ಲಿಂಗಬದಲಾವಣೆ ಶಸ್ತ್ರಚಿಕಿತ್ಸೆ ಅಥವಾ ಹಾರ್ಮೋನ್ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ತೃತೀಯಲಿಂಗಿಗಳು, ಲಸಿಕೆಯಿಂದ ತೊಂದರೆಯಾಗಬಹುದು ಎಂಬ ಕಾರಣಕ್ಕೆ ಲಸಿಕೆ ಪಡೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಅಂಶವನ್ನು ಲೋಕಸಭೆಯಲ್ಲಿ ಉಲ್ಲೇಖಿಸಲಾಗಿದೆ.

           ಇದುವರೆಗೂ ದೊರೆತ ಮಾಹಿತಿ ಪ್ರಕಾರ, ದೇಶದಲ್ಲಿ 64,374 ತೃತೀಯಲಿಂಗಿಗಳು ಆಧಾರ್ ಕಾರ್ಡ್ ಹೊಂದಿದ್ದಾರೆ. 2011ರ ಜನಗಣತಿ ಪ್ರಕಾರ 488000 ಮಂದಿ ತೃತೀಯಲಿಂಗಿಗಳಿದ್ದಾರೆ.

ಭಾರತದಲ್ಲಿ ಕೊರೊನಾ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ತ್ವರಿತಗತಿಯಲ್ಲಿ ನಡೆಸಲಾಗುತ್ತಿದೆ. ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಯಕರ್ತರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು.

         ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆ ಆರಂಭಿಸಲಾಗಿದೆ.

           ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 199 ದಿನಗಳಲ್ಲಿ 47.85 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಮಂಗಳವಾರ 61,09,587 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 47,85,44,114 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

          ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,17,26,507ಕ್ಕೆ ಏರಿಕೆಯಾಗಿದೆ. ಈವರೆಗೂ 3,08,96,354 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 4,25,195 ಜನರು ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 4,04,958 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries