ಕೊಚ್ಚಿ: ದೂರುದಾರರ ಜತೆ ರಾಜಿ ಸಂಧಾನ ಮಾಡಿಕೊಂಡರೂ ನೈತಿಕ ಪೋಲೀಸರಿಂದ ಹಲ್ಲೆ ಪ್ರಕರಣ ರದ್ದುಪಡಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಕೆ ಹರಿಪಾಲ್ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮುಸ್ಲಿಮೇತರರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನನ್ನು ವಶಕ್ಕೆ ಪಡೆದು ಮಾರಕಾಯುಧಗಳಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ನಾಸರ್ ಮತ್ತು ಇತರ ಆರೋಪಿಗಳ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಕಾಸರಗೋಡು ಸಹಾಯಕ ಸೆಷನ್ಸ್ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಆರೋಪಿಗಳು ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ಪ್ರಕರಣವನ್ನು ವಜಾಗೊಳಿಸುವಂತೆ ಆರೋಪಿಗಳ ಮನವಿಗೆ ಪಬ್ಲಿಕ್ ಪ್ರಾಸಿಕ್ಯೂಟರ್ ಆಕ್ಷೇಪ ವ್ಯಕ್ತಪಡಿಸಿದರು. ಕೆಲವು ಆರೋಪಿಗಳು ಕ್ರಿಮಿನಲ್ ಹಿನ್ನೆಲೆ ಹೊಂದಿದ್ದು, ವಿಚಾರಣೆ ನಡೆಯುತ್ತಿದೆ ಎಂದು ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಆಗ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತ್ತು. ಪ್ರಕರಣವನ್ನು ವಜಾಗೊಳಿಸುವುದರಿಂದ ಸಮುದಾಯಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ನ್ಯಾಯಾಲಯ ಬೊಟ್ಟುಮಾಡಿದೆ.
ಜುಲೈ 23, 2017 ರಂದು ಯುವತಿಯೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕಣ್ಣೂರು ನಿವಾಸಿಯನ್ನು ಬಂಧಿಸಿ ಆರೋಪಿಗಳು ಮಾರಕಾಯುಧಗಳಿಂದ ಹಲ್ಲೆ ನಡೆಸಿದ್ದರು.





