ನವದೆಹಲಿ: ದೆಹಲಿಯ ಜವಹರಲಾಲ್ ವಿಶ್ವವಿದ್ಯಾಲಯ(ಜೆಎನ್‌ಯು) ಕ್ಯಾಂಪಸ್‌ನಲ್ಲಿ ಭಾನುವಾರ ರಾಮನವಮಿಯ ದಿನ ಮಾಂಸಾಹಾರಿ ಆಹಾರವನ್ನು ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಹಿಂಸಾಚಾರ ಭುಗಿಲೆದ್ದಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ವಿವಿ ಆಡಳಿತ ಮಂಡಳಿಯು 'ಕ್ಯಾಂಪಸ್‌ನಲ್ಲಿ ಯಾವುದೇ ಹಿಂಸಾಚಾರವನ್ನು ಸಹಿಸುವುದಿಲ್ಲ'ಎಂದು ಹೇಳಿದೆ.
ಘಟನೆಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿದ್ದು, ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದೆ.
'ಯಾರಾದರೂ ಹಿಂಸಾಚಾರ ಕೃತ್ಯಗಳಲ್ಲಿ ತೊಡಗಿರುವುದು ಕಂಡುಬಂದರೆ, ಅವರು ವಿಶ್ವವಿದ್ಯಾಲಯದ ನಿಯಮಗಳ ಪ್ರಕಾರ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ' ಎಂದು ಏಪ್ರಿಲ್ 10 ರಂದು ವಿಶ್ವವಿದ್ಯಾಲಯ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಕಾವೇರಿ ಹಾಸ್ಟೆಲ್‌ನಲ್ಲಿ ಭಾನುವಾರ ರಾಮನವಮಿಯಂದು ಮಾಂಸಾಹಾರಿ ಆಹಾರವನ್ನು ನೀಡಿದ್ದಕ್ಕಾಗಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದ್ದು, ಹಿಂಸಾಚಾರದಲ್ಲಿ ಆರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಕ್ಯಾಂಪಸ್‌ನ ಹೊರಗಡೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಳಗಡೆ ವಿಶ್ವವಿದ್ಯಾಲಯದ ಭದ್ರತಾ ಸಿಬ್ಬಂದಿ ಭದ್ರತೆಯ ಹೊಣೆ ಹೊತ್ತಿದೆ.
'ನಮ್ಮ ಸಿಬ್ಬಂದಿಯನ್ನು ಇನ್ನೂ ಜೆಎನ್‌ಯು ಕ್ಯಾಂಪಸ್‌ನೊಳಗೆ ನಿಯೋಜಿಸಲಾಗಿಲ್ಲ. ಏಕೆಂದರೆ, ಪೊಲೀಸ್ ಭದ್ರತೆಗಾಗಿ ವಿಶ್ವವಿದ್ಯಾಲಯವು ಮನವಿ ಮಾಡಿಲ್ಲ. ಆದರೆ, ನಾವು ಪರಿಸ್ಥಿತಿಯ ಮೇಲ್ವಿಚಾರಣೆ ಮಾಡುತ್ತಿದ್ದೇವೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.