ಲಖನೌ: ದೇಶಾದ್ಯಂತ ದಿನೇ ದಿನೇ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಕೋವಿಡ್ ನಿಯಮಗಳಿಗೆ ಸಡಿಲಿಕೆ ನೀಡಿದ್ದ ರಾಜ್ಯಗಳು ಈಗ ಮತ್ತೆ ಬಿಗಿ ಕ್ರಮಕ್ಕೆ ಮುಂದಾಗಿವೆ. ಪಕ್ಕದ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ಸೋಮವಾರ ರಾಜಧಾನಿ ಲಖನೌ ಮತ್ತು ಆರು NCR ಜಿಲ್ಲೆಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ.
ಕೋವಿಡ್ ಪ್ರಕರಣಗಳ ಹೆಚ್ಚಳವು ರಾಷ್ಟ್ರೀಯ ರಾಜಧಾನಿ ಪ್ರದೇಶ(ಎನ್‌ಸಿಆರ್) ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳ ಮೇಲೆ ಪರಿಣಾಮ ಬೀರಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ಗೌತಮ್ ಬುದ್ಧ ನಗರ, ಗಾಜಿಯಾಬಾದ್, ಹಾಪುರ್, ಮೀರತ್, ಬುಲಂದ್‌ಶಹರ್, ಬಾಗ್‌ಪತ್ ಮತ್ತು ರಾಜಧಾನಿ ಲಖನೌದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆ ಕಡ್ಡಾಯಗೊಳಿಸಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ, ಗೌತಮ್ ಬುದ್ಧ ನಗರದಲ್ಲಿ 65, ಗಾಜಿಯಾಬಾದ್‌ನಲ್ಲಿ 20 ಮತ್ತು ಲಖನೌದಲ್ಲಿ 10 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಸ್ಥಿತಿಯ ನಿಕಟ ಮೇಲ್ವಿಚಾರಣೆಗೆ ಆದೇಶಿಸಿದ್ದಾರೆ.
ಇತ್ತೀಚಿಗೆ ಉತ್ತರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾಗುತ್ತಿದ್ದ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರವು ಏಪ್ರಿಲ್ ತಿಂಗಳ ಆರಂಭದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವ ನಿಯಮ ಸಡಿಲಿಕೆ ಮಾಡಿತ್ತು.





