ಕಾಸರಗೋಡು: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಾಮಗಾರಿ ನಡೆಯುತ್ತಿರುವ ಪ್ರದೇಶಗಳಲ್ಲಿ ಭೂಕುಸಿತ, ರಸ್ತೆಗಳ ರಚನೆ ಹಾಗೂ ರಸ್ತೆಯ ಆಸುಪಾಸಿನಲ್ಲಿ ನೀರು ನಿಂತು ಉಂಟಾಗುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ರಸ್ತೆ ನಿರ್ಮಾಣ ಕಂಪನಿಗಳ ನೇತೃತ್ವದಲ್ಲಿ ವಿಶೇಷ ತಂಡವನ್ನು ನಿಯೋಜಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ. ತುರ್ತು ಪರಿಸ್ಥಿತಿಗಳಿಗೆ ತಕ್ಷಣದ ಪ್ರತಿಕ್ರಿಯೆ ಮತ್ತು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ(ಎಡಿಎಂ)ಎ.ಕೆ ರಮೇಂದ್ರನ್ ಅವರ ಅಧ್ಯಕ್ಷತೆಯಲ್ಲಿ ಕಂಪೆನಿ ಅಧಿಕಾರಿಗಳ ಜತೆ ನಡೆದ ಆನ್‍ಲೈನ್ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಭೂಕುಸಿತ ಪೀಡಿತ ಪ್ರದೇಶದ ತಹಸೀಲ್ದಾರ್, ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಹೊಣೆ ಹೊತ್ತಿರುವ ಕಂಪನಿಯ ಅಧಿಕರಿಗಳು, ಪಂಚಾಯಿತಿ ಅಧ್ಯಕ್ಷರು ಹಾಗೂ ಪ್ರತಿನಿಧಿಗಳು ಜಂಟಿಯಾಗಿ ಈ ಬಗ್ಗೆ ಪರಿಶೀಲಿಸಿ ಪರಿಹಾರ ಕಂಡುಕೊಳ್ಳಲಾಗುವುದು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿ ಮತ್ತು ತಾಲೂಕಿನ ನಿಯಂತ್ರಣ ಕೊಠಡಿಗಳನ್ನು ಸಂಪರ್ಕಿಸಬಹುದಾಗಿದೆ. ಮೈಚ, ಪುಲ್ಲೂರು, ಪೆರಿಯ, ಆರಿಕ್ಕಾಡಿ, ಕಾಸರಗೋಡು ನಗರ, ಹೊಸಂಗಡಿ ಪ್ರದೇಶದಲ್ಲಿ ತಕ್ಷಣದಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕರಿಗಳು ಭರವಸೆ ನೀಡಿದ್ದಾರೆ. ತಲಪ್ಪಾಡಿ-ಚೆಂಗಳ, ಚೆಂಗಳ-ಮಾವುಂಗಲ್ ಮತ್ತು ಮಾವುಂಗಲ್-ಕಾಲಿಕ್ಕಡವ್ ಪ್ರದೇಶಗಳಲ್ಲಿ ಕ್ಷಿಪ್ರ ಕಾರ್ಯಾಚರಣೆ ತಂಡವನ್ನು ನಿಯೋಜಿಸಲಾಗಿದೆ. ಅಗತ್ಯ ಯಂತ್ರೋಪಕರಣಗಳನ್ನು ಬಳಸಿಕೊಂಡು ಪ್ರವಾಹ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಮತ್ತು ಸಾರ್ವಜನಿಕರಿಗೆ ಸಮಸ್ಯೆಯಾಗದ ರೀತಿಯಲ್ಲಿ ಕಾರ್ಯಾಚರಣೆಗೆ ಸೂಚಿಸಲಾಗಿದೆ. ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ತಹಸೀಲ್ದಾರರು ಸಭೆ ಆಯೋಜಿಸಲಾಗಿತ್ತು. ಪೆÇಲೀಸರು, ಅಗ್ನಿಶಾಮಕ ಸಿಬ್ಬಂದಿ, ಅಧಿಕಾರಿಗಳು ಉಪಸ್ಥಿತರಿದ್ದರು.




