ನವದೆಹಲಿ: 1991ರ ಪೂಜಾ ಸ್ಥಳಗಳ (ವಿಶೇಷ ಅವಕಾಶಗಳು) ಕಾಯ್ದೆಯಲ್ಲಿನ ಕೆಲ ನಿಬಂಧನೆಗಳ ಸಿಂಧುತ್ವ ಪ್ರಶ್ನಿಸಿ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು (ಪಿಐಎಲ್) ದಾಖಲಾಗಿದ್ದು, ಈ ಸಂಬಂಧ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರಕ್ಕೆ ಬುಧವಾರ ಸೂಚಿಸಿದೆ.
'ತ್ರಿಸದಸ್ಯ ನ್ಯಾಯಪೀಠವು ಈ ವರ್ಷದ ಜುಲೈನಲ್ಲಿ ಈ ಅರ್ಜಿಗಳ ವಿಚಾರಣೆ ನಡೆಸಲಿದೆ. ಅಷ್ಟರೊಳಗೆ ಕೇಂದ್ರ ಸರ್ಕಾರವು ಪ್ರತಿಕ್ರಿಯೆ ಸಲ್ಲಿಸಬೇಕು' ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹಾಗೂ ನ್ಯಾಯಮೂರ್ತಿ ಜೆ.ಬಿ.ಪಾರ್ದಿವಾಲಾ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠ ತಿಳಿಸಿದೆ.
'ನ್ಯಾಯಾಲಯ ಆದೇಶ ನೀಡಿದ್ದರೂ ಕೂಡ ಕೇಂದ್ರ ಸರ್ಕಾರ ಈವರೆಗೂ ಪ್ರತಿಕ್ರಿಯೆ ಸಲ್ಲಿಸಿಲ್ಲ' ಎಂದು ಅರ್ಜಿದಾರರೊಬ್ಬರ ಪರ ವಕೀಲರು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.


