ನವದೆಹಲಿ: ರೋಜ್‌ಗಾರ್ ಯೋಜನೆಯಡಿ ವಿವಿಧ ಉದ್ಯೋಗಗಳಿಗೆ ಹೊಸದಾಗಿ ನೇಮಕವಾಗಿರುವ ಸುಮಾರು 51 ಸಾವಿರ ಮಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೋಮವಾರ) ನೇಮಕಾತಿ ಪತ್ರ ವಿತರಿಸಿ, ವಿಡಿಯೊ ಕಾನ್ಫರೆನ್ಸ್ ಮೂಲಕ ಅವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ (ಪಿಎಂಒ) ಹೇಳಿದೆ.
0
samarasasudhi
ಆಗಸ್ಟ್ 28, 2023
ನವದೆಹಲಿ: ರೋಜ್‌ಗಾರ್ ಯೋಜನೆಯಡಿ ವಿವಿಧ ಉದ್ಯೋಗಗಳಿಗೆ ಹೊಸದಾಗಿ ನೇಮಕವಾಗಿರುವ ಸುಮಾರು 51 ಸಾವಿರ ಮಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೋಮವಾರ) ನೇಮಕಾತಿ ಪತ್ರ ವಿತರಿಸಿ, ವಿಡಿಯೊ ಕಾನ್ಫರೆನ್ಸ್ ಮೂಲಕ ಅವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ (ಪಿಎಂಒ) ಹೇಳಿದೆ.
ದೇಶದಾದ್ಯಂತ ನಡೆದಿರುವ ಈ ಹೊಸ ನೇಮಕಾತಿಯಲ್ಲಿ ಉದ್ಯೋಗ ಪಡೆದಿರುವವರು ಕಂದಾಯ ಇಲಾಖೆ, ಹಣಕಾಸು ಸೇವೆಗಳ ಇಲಾಖೆ, ಅಂಚೆ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಲಸಂಪನ್ಮೂಲ ಇಲಾಖೆ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ, ಗೃಹ ವ್ಯವಹಾರಗಳ ಸಚಿವಾಲಯ, ರಕ್ಷಣಾ ಸಚಿವಾಲಯ ಸೇರಿ ವಿವಿಧ ಸಚಿವಾಲಯಗಳು ಹಾಗೂ ಕೇಂದ್ರ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ಸೇವೆ ಸಲ್ಲಿಸಲಿದ್ದಾರೆ.
ದೇಶದಾದ್ಯಂತ 45 ಸ್ಥಳಗಳಲ್ಲಿ ರೋಜ್‌ಗಾರ್ ಮೇಳ ನಡೆಸಲಾಗಿತ್ತು. ಈ ಯೋಜನೆಯಡಿ ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇಮಕಾತಿಗಳು ನಡೆಯುತ್ತಿವೆ. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್‌ಗಾರ್ ಮೇಳ ಮಹತ್ವದ ಹೆಜ್ಜೆಯಾಗಿದೆ ಎಂದು ಪಿಎಂಒ ತಿಳಿಸಿದೆ.
ಜುಲೈ 22ರಂದು ರೋಜ್‌ಗಾರ್ ಯೋಜನೆಯಡಿ ವಿವಿಧ ಉದ್ಯೋಗಗಳಿಗೆ ಹೊಸದಾಗಿ ನೇಮಕವಾಗಿರುವ ಸುಮಾರು 70 ಸಾವಿರಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರಗಳನ್ನು ಮೋದಿ ವಿತರಿಸಿದ್ದರು.