HEALTH TIPS

ಕರ್ಫ್ಯೂ ಸಡಿಲಿಕೆ: ಶಾಂತಿ ಕಾಪಾಡಲು ಮನವಿ

               ಇಂಫಾಲ್: ಮಣಿಪುರದ ಇಂಫಾಲ್‌ ಕಣಿವೆಯಲ್ಲಿ ಶುಕ್ರವಾರ ಯಾವುದೇ ಹಿಂಸಾಚಾರ ವರದಿಯಾಗಿಲ್ಲ. ಅಗತ್ಯ ವಸ್ತುಗಳು ಮತ್ತು ಔಷಧಿಗಳನ್ನು ಖರೀದಿಸಲು ಜನರಿಗೆ ಅನುಕೂಲವಾಗುವಂತೆ ಅಧಿಕಾರಿಗಳು ಇಂಫಾಲ್ ಪೂರ್ವ ಮತ್ತು ಪಶ್ಚಿಮ ಜಿಲ್ಲೆಗಳಲ್ಲಿ ಬೆಳಿಗ್ಗೆ 5ರಿಂದ 11 ಗಂಟೆಯವರೆಗೆ ಕರ್ಫ್ಯೂ ಸಡಿಲಿಸಿದರು.

              ಹಿಂಸಾಚಾರ ವರದಿಯಾಗದ ಕಾರಣ ಸರ್ಕಾರ ಈ ಎರಡು ಜಿಲ್ಲೆಗಳಲ್ಲಿ ಶನಿವಾರ ಬೆಳಿಗ್ಗೆ 5ರಿಂದ ಮಧ್ಯಾಹ್ನ 2ರವರೆಗೆ ಕರ್ಫ್ಯೂ ಸಡಿಲಿಸಿದೆ. ಪ್ರತ್ಯೇಕ ಆದೇಶದಲ್ಲಿ ಬಿಷ್ಣುಪುರ ಜಿಲ್ಲಾಡಳಿತ ತನ್ನ ವ್ಯಾಪ್ತಿಯಲ್ಲಿ ಶನಿವಾರ ಬೆಳಿಗ್ಗೆ 5ರಿಂದ ಸಂಜೆ 5ರವರೆಗೆ ಕರ್ಫ್ಯೂ ಸಡಿಲಿಕೆ ಮಾಡಿದೆ.

                ಇಂಫಾಲ್ ಪೂರ್ವದ ಚೆಕಾನ್ ಎಂಬಲ್ಲಿ ಗುರುವಾರ ತಡರಾತ್ರಿ ಗುಂಪೊಂದು ಮನೆಯೊಂದಕ್ಕೆ ಬೆಂಕಿ ಹಚ್ಚಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ರಾಜಧಾನಿಯ ವಿವಿಧ ಸ್ಥಳಗಳಲ್ಲಿ ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವೆ ಗುರುವಾರ ರಾತ್ರಿ ನಡೆದ ಘರ್ಷಣೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

              ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಚರ್ಚಿಸಲು ಸಿಎಪಿಎಫ್‌ನ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗಿದೆ. ಶಾಂತಿ ಕಾಪಾಡಲು ಮತ್ತು ಪರಿಸ್ಥಿತಿ ಸಹಜ ಸ್ಥಿತಿಗೆ ತರಲು ಸಹಕರಿಸುವಂತೆ ವಿದ್ಯಾರ್ಥಿಗಳಿಗೆ ಪೊಲೀಸರು ಮನವಿ ಮಾಡಿದ್ದಾರೆ. ಪರಿಸ್ಥಿತಿಯ ಲಾಭ ಪಡೆಯುವ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

             ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪೂರ್ವಜರ ನಿವಾಸದ ಮೇಲೆ ಗುರುವಾರ ರಾತ್ರಿ ಗುಂಪೊಂದು ದಾಳಿ ನಡೆಸಲು ಯತ್ನಿಸಿದ ಪರಿಣಾಮ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಹಲವೆಡೆ ಕರ್ಫ್ಯೂ ಜಾರಿಗೊಳಿಸಲಾಗಿತ್ತು.

             ಪ್ರಧಾನಿ ಮಧ್ಯಪ್ರವೇಶಿಸಲಿ: ಸಂಸತ್ತಿನಲ್ಲಿ ಭರವಸೆ ನೀಡಿದ ಹೊರತಾಗಿಯೂ ಸಂಘರ್ಷ ಪೀಡಿತ ಮಣಿಪುರದಲ್ಲಿ ಶಾಂತಿ ನೆಲೆಸಿಲ್ಲ. ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಎನ್‌ಸಿಪಿ (ಶರದ್‌ ಪವಾರ್ ಬಣ) ಶುಕ್ರವಾರ ಒತ್ತಾಯಿಸಿದೆ.

'ರಾಜ್ಯದಲ್ಲಿ ಹಿಂಸಾಚಾರವನ್ನು ತಡೆಯುವಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಮತ್ತು ಕೇಂದ್ರ ಸರ್ಕಾರ ವಿಫಲವಾಗಿವೆ' ಎಂದು ಪಕ್ಷದ ರಾಷ್ಟ್ರೀಯ ವಕ್ತಾರ ಕ್ಲೈಡ್ ಕ್ರಾಸ್ಟೊ ಹೇಳಿದ್ದಾರೆ.

             'ಮಣಿಪುರದ ಪರಿಸ್ಥಿತಿ ಸುಧಾರಿಸಲು ಕೇಂದ್ರ ಸರ್ಕಾರ ಏನು ಮಾಡುತ್ತಿದೆ? ಮಣಿಪುರ ವಿಚಾರವಾಗಿ ಚರ್ಚೆ ನಡೆಸಲು ಸದನದಲ್ಲಿ ಅವಕಾಶ ನೀಡಲಿಲ್ಲ' ಎಂದು ಶಿವಸೇನಾ ನಾಯಕ ಸಂಜಯ್ ರಾವುತ್ ಆರೋಪಿಸಿದ್ದಾರೆ.

                                             ಗುವಾಹಟಿ ವರದಿ

               ( ರಾಯಿಟರ್ಸ್‌); 'ಮಣಿಪುರದ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರ ಖಾಸಗಿ ನಿವಾಸದ ಮೇಲೆ ಗುಂಪೊಂದು ದಾಳಿ ನಡೆಸಿದೆ ಎಂಬ ವರದಿ ‌ಸುಳ್ಳು' ಎಂದು ಪೊಲೀಸರು ತಿಳಿಸಿದ್ದಾರೆ.

             ಮಾಧ್ಯಮಗಳಲ್ಲಿ ಪ್ರಕಟವಾದ ವರದಿ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ರಾಜ್ಯ ಪೊಲೀಸರು, 'ಮುಖ್ಯಮಂತ್ರಿ ಅವರ ವೈಯಕ್ತಿಕ ನಿವಾಸದ ಮೇಲೆ ದಾಳಿ ನಡೆದಿದೆ ಎಂಬ ಸುದ್ದಿ ಸುಳ್ಳು ಮತ್ತು ದಾರಿತಪ್ಪಿಸುವಂತಿದೆ. ಈಗಾಗಲೇ ಸಾಕಷ್ಟು ಭದ್ರತೆ ಒದಗಿಸಲಾಗಿದೆ' ಎಂದು 'ಎಕ್ಸ್‌'ನಲ್ಲಿ ತಿಳಿಸಿದ್ದಾರೆ .

'ಮೊಬೈಲ್ ಇಂಟರ್‌ನೆಟ್‌ ಲಭ್ಯವಿಲ್ಲದ ಕಾರಣ, ಜೀವನವು ನರಕವಾಗುತ್ತಿದೆ' ಎಂದು ಇಂಫಾಲ್‌ನ ಕಾಲೇಜು ವಿದ್ಯಾರ್ಥಿಗಳು ಹೇಳಿದ್ದಾರೆ.

                  ಮೈತೇಯಿ ಸಮುದಾಯಕ್ಕೆ ಸೇರಿದ ಇಬ್ಬರು ವಿದ್ಯಾರ್ಥಿಗಳ ಹತ್ಯೆ ಖಂಡಿಸಿ ಮಣಿಪುರ ರಾಜಧಾನಿ ಇಂಫಾಲ್‌ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ರ್‍ಯಾಲಿ ಹಿಂಸಾಚಾರಕ್ಕೆ ತಿರುಗಿತ್ತು. ಘಟನೆಯಲ್ಲಿ ಗಾಯಗೊಂಡಿದ್ದ ನೂರಾರು ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries