ನವದೆಹಲಿ: ಪ್ರಜಾಪ್ರತಿನಿಧಿ ಕಾಯ್ದೆ(ಆರ್‌ಪಿಎ) ಉಲ್ಲಂಘಿಸಿ ಎರಡು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಗೆ ಹೆಸರು ಸೇರಿಸಿದ ಆರೋಪ ಎದುರಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಸಮನ್ಸ್ ಜಾರಿ ಮಾಡಿದೆ.
ಬಿಜೆಪಿ ನಾಯಕ ಹರೀಶ್ ಖುರಾನಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅರ್ಜಿಂದರ್ ಕೌರ್ ಅವರು, ಆರೋಪಿ ಸುನೀತಾ ಅವರಿಗೆ ನವೆಂಬರ್ 18 ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ.
"ದೂರುದಾರರ ಆರೋಪಗಳನ್ನು ಮತ್ತು ಇತರ ಸಾಕ್ಷ್ಯಗಳನ್ನು ಪರಿಶೀಲಿಸಿದ ನಂತರ ಆರೋಪಿಯಾದ ಸುನೀತಾ ಕೇಜ್ರಿವಾಲ್ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ ಅಡಿ ಪ್ರಕರಣದ ವಿಚಾರಣೆಗೆ ಅಂಗೀಕರಿಸಿದ್ದು, ಆರೋಪಿಗೆ ಸಮನ್ಸ್ ನೀಡಲಾಗಿದೆ ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ.
ಇಬ್ಬರು ಸಾಕ್ಷಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ ಮತದಾರರ ಪಟ್ಟಿಗಳ ಪ್ರಕಾರ, ಸುನೀತಾ ಕೇಜ್ರಿವಾಲ್ ಅವರ ಹೆಸರು ದೆಹಲಿಯ ಚಾಂದಿನಿ ಚೌಕ್ ವಿಧಾನಸಭಾ ಕ್ಷೇತ್ರದಲ್ಲಿ ಮತ್ತು ಉತ್ತರ ಪ್ರದೇಶದ ಸಾಹಿಬಾಬಾದ್ ವಿಧಾನಸಭಾ ಕ್ಷೇತ್ರದಲ್ಲಿ ಕಾಣಿಸಿಕೊಂಡಿದೆ.