ಕೊಚ್ಚಿ: ಇತ್ತೀಚೆಗೆ ಕೊಚ್ಚಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಮೂಲಕ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೇರಳ ಪೊಲೀಸರು ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ.
ಕೆಪಿಸಿಸಿ ಡಿಜಿಟಲ್ ಮೀಡಿಯಾ ಸಂಚಾಲಕ ಪಿ. ಸರಿನ್ ಅವರು ನೀಡಿದ ದೂರಿನ ಆಧಾರದ ಮೇಲೆ ಎರ್ನಾಕುಲಂ ಸೆಂಟ್ರಲ್ ಪೋಲಿಸರು ಕೇಂದ್ರ ಸಚಿವರ ವಿರುದ್ಧ ಎರಡನೇ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ವಕ್ತಾರ ಅನಿಲ್ ಆಂಟೋನಿ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದು, ಅವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.
ಸಚಿವ ರಾಜೀವ್ ಚಂದ್ರಶೇಖರ್ ಅವರ ಹೇಳಿಕೆಯೊಂದು ಸಮಾಜದ ವಿವಿಧ ಸಮುದಾಯಗಳ ನಡುವೆ ದ್ವೇಷವನ್ನು ಹುಟ್ಟಿಸುವಂಥದ್ದು ಎಂಬ ಆರೋಪದ ಅಡಿಯಲ್ಲಿ ಎರಡು ದಿನಗಳ ಹಿಂದೆ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಹಮಾಸ್ ಸಂಘಟನೆಯನ್ನು ಓಲೈಸುತ್ತಿದ್ದಾರೆ ಎಂಬುದನ್ನು ತೋರಿಸಿಕೊಟ್ಟ ಕಾರಣಕ್ಕೆ ಈ ಪ್ರಕರಣ ದಾಖಲಿಸಲಾಗಿದೆ ಎಂದು ರಾಜೀವ್ ಅವರು ಪ್ರತಿಕ್ರಿಯಿಸಿದ್ದರು.