ನವದೆಹಲಿ: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಕೋರಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರು ಸಲ್ಲಿಸಿರುವ ಅರ್ಜಿಗಳನ್ನು ಆಗಸ್ಟ್ 5ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಸೋಮವಾರ ತಿಳಿಸಿದೆ.
0
samarasasudhi
ಜುಲೈ 30, 2024
ನವದೆಹಲಿ: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಕೋರಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರು ಸಲ್ಲಿಸಿರುವ ಅರ್ಜಿಗಳನ್ನು ಆಗಸ್ಟ್ 5ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಸೋಮವಾರ ತಿಳಿಸಿದೆ.
ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನು ಒಳಗೊಂಡ ನ್ಯಾಯಪೀಠದ ಎದುರು ಅರ್ಜಿಗಳನ್ನು ವಿಚಾರಣೆ ನಡೆಸಲು ಪಟ್ಟಿ ಮಾಡಲಾಗಿದೆ.
'ಸಿಸೋಡಿಯಾ ಅವರ ಅರ್ಜಿಗೆ ಸಂಬಂಧಿಸಿದಂತೆ ಸಿಬಿಐ ಪ್ರತಿಕ್ರಿಯೆ ನೀಡಿದೆ' ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು ತಿಳಿಸಿದರು.
'ಸಿಸೋಡಿಯಾ ಅವರು ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಎರಡು ಬಾರಿ ಅರ್ಜಿ ಸಲ್ಲಿಸಿದ್ದಾರೆ. ಒಂದೇ ಆದೇಶವನ್ನು ಎರಡು ಬಾರಿ ಪ್ರಶ್ನಿಸುವಂತಿಲ್ಲ' ಎಂದು ಆಕ್ಷೇಪ ವ್ಯಕ್ತಪಡಿಸಿದರು.
'ಜಾರಿ ನಿರ್ದೇಶನಾಲಯವು ಕೌಂಟರ್ ಅಫಿಡವಿಟ್ ಸಿದ್ಧಪಡಿಸಿದ್ದು, ಶೀಘ್ರವೇ ಸಲ್ಲಿಸಲಿದೆ' ಎಂದು ಹೇಳಿದರು.
ಸಿಸೋಡಿಯಾ ಅವರು, ದೆಹಲಿ ಹೈಕೋರ್ಟ್ ಮೇ 21ರಂದು ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ವಿಚಾರಣಾ ನ್ಯಾಯಾಲಯವು ಏಪ್ರಿಲ್ 30ರಂದು ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಸಿಸೋಡಿಯಾ ಅವರನ್ನು ಫೆ.26ರಂದು ಸಿಬಿಐ ಬಂಧಿಸಿದೆ.