ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರದ ಶಾಲೆಯೊಂದರಲ್ಲಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಘಟನೆ ವರದಿಯಾದ ಬೆನ್ನಲ್ಲೇ ಶಾಲೆಗಳಲ್ಲಿ 'ವಿಶಾಖ ಸಮಿತಿ' ರಚಿಸುವುದಾಗಿ ಶಿಕ್ಷಣ ಸಚಿವ ದೀಪಕ್ ಕೇಸರ್ಕರ್ ಮಂಗಳವಾರ ತಿಳಿಸಿದ್ದಾರೆ.
0
samarasasudhi
ಆಗಸ್ಟ್ 21, 2024
ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರದ ಶಾಲೆಯೊಂದರಲ್ಲಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಘಟನೆ ವರದಿಯಾದ ಬೆನ್ನಲ್ಲೇ ಶಾಲೆಗಳಲ್ಲಿ 'ವಿಶಾಖ ಸಮಿತಿ' ರಚಿಸುವುದಾಗಿ ಶಿಕ್ಷಣ ಸಚಿವ ದೀಪಕ್ ಕೇಸರ್ಕರ್ ಮಂಗಳವಾರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಗಳಲ್ಲಿ ಸಿಸಿಟಿವಿ ಕ್ಯಾಮರಾಗಳ ಅಳವಡಿಕೆ ಕಡ್ಡಾಯವಾಗಿದೆ ಹಾಗೂ ಅವುಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂದು ಶಾಲೆ ಆಡಳಿತವೇ ಪರಿಶೀಲಿಸಬೇಕು.
'ವಿಶಾಖ ಪ್ರಕರಣದ ಮಾರ್ಗಸೂಚಿ ಅನ್ವಯ ಕೆಲಸದ ಸ್ಥಳಗಳಲ್ಲಿ ಲೈಂಗಿಕ ದೌರ್ಜನ್ಯ ತಡೆಯಲು ಆಂತರಿಕ ಸಮಿತಿ ರಚಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಅದೇ ಮಾದರಿಯಲ್ಲೇ ರಾಜ್ಯದ ಶಾಲೆಗಳಲ್ಲಿ ವಿಶಾಖ ಸಮಿತಿಯನ್ನು ರಚಿಸಲಾಗುವುದು' ಎಂದು ಕೇಸರ್ಕರ್ ಮಾಹಿತಿ ನೀಡಿದ್ದಾರೆ.
ಬದ್ಲಾಪುರದ ಶಾಲೆಯಲ್ಲಿ ನಡೆದ ಘಟನೆ ವೇಳೆ ಸಿಸಿಟಿವಿ ಕ್ಯಾಮರಾಗಳು ಕಾರ್ಯನಿರ್ವಹಿಸುತ್ತಿಲ್ಲ ಎಂಬುವುದು ತಿಳಿದು ಬಂದಿದೆ ಎಂದು ಕೇಸರ್ಕರ್ ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪೋಷಕರು ಮತ್ತು ಸ್ಥಳೀಯರು ಬದ್ಲಾಪುರ ರೈಲು ನಿಲ್ದಾಣದಲ್ಲಿ ರೈಲುಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿರುವುದಾಗಿ ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.
ಮೂರು ಮತ್ತು ನಾಲ್ಕು ವರ್ಷ ವಯಸ್ಸಿನ ಶಿಶುವಿಹಾರದ ಇಬ್ಬರು ವಿದ್ಯಾರ್ಥಿನಿಯರನ್ನು ನಿಂದಿಸಿ, ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬದ್ಲಾಪುರದ ಶಾಲಾ ಸಿಬ್ಬಂದಿಯೊಬ್ಬರನ್ನು ಶನಿವಾರ ಪೊಲೀಸರು ಬಂಧಿಸಿದ್ದರು.
ಘಟನೆ ಸಂಬಂಧ ಶಾಲಾ ಆಡಳಿತ ಮಂಡಳಿಯು ಪ್ರಾಂಶುಪಾಲರು, ಶಿಕ್ಷಕಿ ಹಾಗೂ ಮಹಿಳಾ ಅಟೆಂಡರ್‌ನನ್ನು ಅಮಾನತುಗೊಳಿಸಿದೆ ಎಂದು ವರದಿಯಾಗಿದೆ.