ನವದೆಹಲಿ: ಆರೋಗ್ಯ ಕಾರ್ಯಕರ್ತರ ಸುರಕ್ಷತೆಯನ್ನು ಖಾತರಿಪಡಿಸಿಕೊಳ್ಳಲು ಏನೆಲ್ಲಾ ಕ್ರಮಗಳನ್ನು ಅನುಸರಿಸಬೇಕು ಎಂಬ ಸಲಹೆ ನೀಡಲು ಸಮಿತಿಯೊಂದನ್ನು ರಚಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಹೇಳಿದೆ.
0
samarasasudhi
ಆಗಸ್ಟ್ 18, 2024
ನವದೆಹಲಿ: ಆರೋಗ್ಯ ಕಾರ್ಯಕರ್ತರ ಸುರಕ್ಷತೆಯನ್ನು ಖಾತರಿಪಡಿಸಿಕೊಳ್ಳಲು ಏನೆಲ್ಲಾ ಕ್ರಮಗಳನ್ನು ಅನುಸರಿಸಬೇಕು ಎಂಬ ಸಲಹೆ ನೀಡಲು ಸಮಿತಿಯೊಂದನ್ನು ರಚಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಹೇಳಿದೆ.
ರಾಜ್ಯ ಸರ್ಕಾರಗಳು ಒಳಗೊಂಡಂತೆ ಸಂಬಂಧಪಟ್ಟ ಎಲ್ಲ ಭಾಗೀದಾರರಿಗೆ ಈ ಸಮಿತಿಯೊಂದಿಗೆ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಅವಕಾಶ ನೀಡಲಾಗುವುದು ಎಂದು ತಿಳಿಸಿದೆ.
ಡೆಂಗಿ ಮತ್ತು ಮಲೇರಿಯಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸಾರ್ವಜನಿಕರ ಹಿತಾಸಕ್ತಿಯನ್ನು ಪರಿಗಣಿಸಿ, ವೈದ್ಯರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಬೇಕು ಎಂದು ಮನವಿ ಮಾಡಿದೆ.
ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಫೆಡರೇಷನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ (ಫೋರ್ಡಾ) ಪ್ರತಿನಿಧಿಗಳು ಶನಿವಾರ ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ಆರೋಗ್ಯ ಕಾರ್ಯಕರ್ತರ ಸುರಕ್ಷತೆ ಖಾತರಿಪಡಿಸುವಂತೆ ಮನವಿ ಮಾಡಿದರು.
'ವಿವಿಧ ವೈದ್ಯಕೀಯ ಸಂಘಗಳು ಮುಂದಿಟ್ಟಿರುವ ಬೇಡಿಕೆಗಳನ್ನು ಆಲಿಸಿರುವ ಸಚಿವಾಲಯ, ಆರೋಗ್ಯ ಕಾರ್ಯಕರ್ತರ ಸುರಕ್ಷತೆ ಖಾತರಿಪಡಿಸಿಕೊಳ್ಳಲು ಎಲ್ಲ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದೆ. ಸರ್ಕಾರವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂಬುದನ್ನು ಸಂಘಗಳ ಪ್ರತಿನಿಧಿಗಳಿಗೆ ತಿಳಿಸಲಾಯಿತು' ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.