ಕೋಲ್ಕತ್ತ: ಬಾಂಗ್ಲಾದೇಶದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದು, ನೆರೆಯ ದೇಶದ ಬಗ್ಗೆ ಹೇಳಿಕೆ ನೀಡುವುದು ಸರಿಯಲ್ಲ ಎಂದಿದ್ದಾರೆ.
ಬಾಂಗ್ಲಾದೇಶದ ಹಿಂದೂ ಮುಖಂಡ ಚಿನ್ಮಯ ಕೃಷ್ಣ ದಾಸ್ ಅವರನ್ನು ಕೆಲ ದಿನಗಳ ಹಿಂದೆ ಇಸ್ಕಾನ್‌ನಿಂದ ಉಚ್ಛಾಟಿಸಲಾಗಿತ್ತು.
ನಂತರ ಅವರ ಬಂಧನವಾಯಿತು. ಇದರಿಂದಾಗಿ ಬಾಂಗ್ಲಾದೇಶದಲ್ಲಿ ಗಲಭೆ ಆರಂಭವಾಯಿತು. ಇದರಲ್ಲಿ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಸೈಫುಲ್ ಇಸ್ಲಾಮ್ ಅವರ ಹತ್ಯೆಯಾಯಿತು.
ಈ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇಂತಹ ವಿಷಯಗಳು ಕೇಂದ್ರದ ವ್ಯಾಪ್ತಿಗೆ ಬರುತ್ತದೆ. ಕೇಂದ್ರದ ನಿಲುವಿಗೆ ರಾಜ್ಯ ಸರ್ಕಾರ ಬದ್ಧವಾಗಿರುತ್ತದೆ ಎಂದು ಹೇಳಿದ್ದಾರೆ.
ಈ ಘಟನೆ ಬಗ್ಗೆ ಇಸ್ಕಾನ್ ಸಂಘಟನೆಯ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದೇನೆ ಎಂದೂ ಮಮತಾ ತಿಳಿಸಿದ್ದಾರೆ.
ಇಸ್ಕಾನ್ ತೀವ್ರವಾದಿ ಸಂಘಟನೆಯಾಗಿದ್ದು, ಅದನ್ನು ಕೂಡಲೇ ನಿಷೇಧಿಸಬೇಕು ಎಂದು ಆಗ್ರಹಿಸಿ ಸುಪ್ರೀಂ ಕೋರ್ಟ್‌ನ ವಕೀಲರು ಬಾಂಗ್ಲಾದೇಶ ಸರ್ಕಾರಕ್ಕೆ ಬುಧವಾರ ಪತ್ರ ಬರೆದಿದ್ದಾರೆ.
'ವಕೀಲ ಸೈಫುಲ್ ಅವರ ಕೊಲೆ, ಇಸ್ಕಾನ್‌ನ ಕಾರ್ಯಾಚರಣೆ ಹಾಗೂ 33 ಜನರನ್ನು ಬಂಧಿಸಿರುವುದು ಸೇರಿದಂತೆ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ' ಎಂದು ಅಟಾರ್ನಿ ಜನರಲ್ ಇತ್ತೀಚೆಗೆ ಮಾಹಿತಿ ನೀಡಿದ್ದರು.
ದಾಸ್ ಅವರ ಬಂಧನ ಮತ್ತು ಜಾಮೀನು ನಿರಾಕರಣೆ ಕುರಿತು ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಬಾಂಗ್ಲಾದಲ್ಲಿನ ಅಲ್ಪಸಂಖ್ಯಾತರಾದ ಹಿಂದೂಗಳ ಸುರಕ್ಷತೆ ಹಾಗೂ ಭದ್ರತೆಗೆ ಅಗತ್ಯ ಕ್ರಮಗಳನ್ನು ಢಾಕಾ ಕೈಗೊಳ್ಳಲಿದೆ ಎಂದು ಭರವಸೆ ವ್ಯಕ್ತಪಡಿಸಿದೆ.

