ಶ್ರೀನಗರ: 2019ರ ಆಗಸ್ಟ್‌ನಲ್ಲಿ ಕೇಂದ್ರ ಸರ್ಕಾರವು ಹಿಂಪಡೆದಿದ್ದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಮರುಸ್ಥಾಪಿಸುವಂತೆ ಆಗ್ರಹಿಸಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಇಂದು (ಬುಧವಾರ) ಐತಿಹಾಸಿಕ ನಿರ್ಣಯವನ್ನು ಅಂಗೀಕರಿಸಲಾಗಿದೆ.
0
samarasasudhi
ನವೆಂಬರ್ 06, 2024
ಶ್ರೀನಗರ: 2019ರ ಆಗಸ್ಟ್‌ನಲ್ಲಿ ಕೇಂದ್ರ ಸರ್ಕಾರವು ಹಿಂಪಡೆದಿದ್ದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಮರುಸ್ಥಾಪಿಸುವಂತೆ ಆಗ್ರಹಿಸಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಇಂದು (ಬುಧವಾರ) ಐತಿಹಾಸಿಕ ನಿರ್ಣಯವನ್ನು ಅಂಗೀಕರಿಸಲಾಗಿದೆ.
ಸದ್ಯ ನಡೆಯುತ್ತಿರುವ ವಿಧಾನಸಭೆ ಅಧಿವೇಶನದ ಮೂರನೇ ದಿನವಾದ ಇಂದು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ನಾಯಕ ಮತ್ತು ಉಪ ಮುಖ್ಯಮಂತ್ರಿ ಸುರೀಂದರ್ ಕುಮಾರ್ ಚೌಧರಿ ಅವರು ನಿರ್ಣಯವನ್ನು ಮಂಡಿಸಿದರು. ಪ್ರತಿಪಕ್ಷ ಬಿಜೆಪಿ ಸದಸ್ಯರ ಪ್ರತಿಭಟನೆಯ ಹೊರತಾಗಿಯೂ ಸರ್ಕಾರ ನಿರ್ಣಯವನ್ನು ಅಂಗೀಕರಿಸಿದೆ.
'ಈ ಶಾಸನಸಭೆಯು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ಸಾಂವಿಧಾನಿಕ ಖಾತರಿಗಳ ಪ್ರಾಮುಖ್ಯತೆಯನ್ನು ಪುನರುಚ್ಚರಿಸುತ್ತದೆ. ವಿಶೇಷ ಸ್ಥಾನಮಾನವು ಜಮ್ಮು ಮತ್ತು ಕಾಶ್ಮೀರದ ಸಂಸ್ಕೃತಿ ಮತ್ತು ಜನರ ಹಕ್ಕುಗಳನ್ನು ರಕ್ಷಿಸುತ್ತದೆ' ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಮರುಸ್ಥಾಪನೆ ಮತ್ತು ಸಾಂವಿಧಾನಿಕ ಕಾರ್ಯವಿಧಾನಗಳನ್ನು ರೂಪಿಸುವ ಕುರಿತು ಕೇಂದ್ರ ಸರ್ಕಾರದ ಜತೆ ಚರ್ಚಿಸಲು ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಸಿದ್ಧರಿರುವುದಾಗಿ ತಿಳಿಸಲಾಗಿದೆ.
ಈಚೆಗೆ ನಡೆದ ವಿಧಾನಸಭೆ ಚುನಾವಣೆಗೂ ಮುನ್ನ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಮತ್ತೆ ರಾಜ್ಯದ ಸ್ಥಾನಮಾನ ನೀಡುವುದು ಮತ್ತು ಸಂವಿಧಾನದ 370ನೇ ವಿಧಿ ಅಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ಮರುಸ್ಥಾಪನೆ ಸೇರಿದಂತೆ 12 ಭರವಸೆಗಳನ್ನು ನೀಡಿತ್ತು.