ನವದೆಹಲಿ: ಚೆನ್ನೈನ ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ದೆಹಲಿಯ ತಮಿಳುನಾಡು ಭವನದ ಮುಂದೆ ಪ್ರತಿಭಟನೆ ನಡೆಸಿತು.
ಅಣ್ಣಾ ವಿಶ್ವವಿದ್ಯಾಲಯದಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿನಿಗೆ ನ್ಯಾಯ ದೊರಕಿಸಿಕೊಡಬೇಕೆಂದು ನಾವು ಒತ್ತಾಯಿಸುತ್ತೇವೆ. ಸಮಗ್ರ ತನಿಖೆ ನಡೆಸಬೇಕು ಮತ್ತು ತಮಿಳುನಾಡಿನಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ಬಂಧಿಸಿದ ಕಾರ್ಯಕರ್ತರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಎಬಿವಿಪಿ ರಾಷ್ಟ್ರೀಯ ಕಾರ್ಯದರ್ಶಿ ಶಿವಾಂಗಿ ಖರ್ವಾಲ್ ಆಗ್ರಹಿಸಿದ್ದಾರೆ.
'ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ತೀವ್ರ ದುಃಖ ತಂದಿದೆ. ದುಷ್ಕರ್ಮಿಗಳ ವಿರುದ್ಧ ಶೀಘ್ರ ತನಿಖೆ ಮತ್ತು ಕಠಿಣ ಕ್ರಮ ಕೈಗೊಳ್ಳುವಂತೆ ನಾವು ಒತ್ತಾಯಿಸುತ್ತೇವೆ. ಸಂತ್ರಸ್ತೆಗೆ ನ್ಯಾಯ ಸಿಗುವವರೆಗೆ ನಾವು ಹೋರಾಟ ಮಾಡುತ್ತೇವೆ' ಎಂದು ಎಬಿವಿಪಿ ದೆಹಲಿ ರಾಜ್ಯ ಕಾರ್ಯದರ್ಶಿ ಹರ್ಷ್ ಅತ್ರಿ ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ, 'ಎಬಿವಿಪಿ ಮಹಿಳೆಯರ ಘನತೆಗಾಗಿ ನಿಂತಿದೆ' ಎಂಬ ಸಂದೇಶಗಳಿರುವ ಫಲಕಗಳನ್ನು ಹಿಡಿದಿದ್ದರು. 'ಎಂ.ಕೆ.ಸ್ಟಾಲಿನ್, ಎಚ್ಚೆತ್ತುಕೊಳ್ಳಿ' ಮತ್ತು 'ಎಬಿವಿಪಿ ಕಾರ್ಯಕರ್ತರನ್ನು ಬಿಡುಗಡೆ ಮಾಡಿ' ಎಂಬ ಘೋಷಣೆಗಳನ್ನು ಕೂಗಿದರು.
ಡಿಸೆಂಬರ್ 23 ರಂದು ಅಣ್ಣಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಮೇಲೆ ರಸ್ತೆ ಬದಿಯ ವ್ಯಾಪಾರಿಗಳಿಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದು, ಆಕೆಯ ಸ್ನೇಹಿತನ ಮೇಲೂ ಹಲ್ಲೆ ನಡೆಸಿದ್ದರು.




