ನವದೆಹಲಿ: ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಕಾಯ್ದೆ - 2019ನ್ನು ಉಲ್ಲಂಘಿಸಿ, ಒಂದೇ ಬಾರಿಗೆ ಮೂರು ಸಲ ತಲಾಖ್ ಎನ್ನುವ ಮೂಲಕ ಪತ್ನಿಗೆ ವಿಚ್ಛೇದನ ನೀಡಿದ ಮುಸ್ಲಿಂ ಪುರುಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಹಾಗೂ ದೋಷಾರೋಪ ಪಟ್ಟಿಯ ಬಗ್ಗೆ ಮಾಹಿತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಸೂಚನೆ ನೀಡಿದೆ.
ಒಂದೇ ಬಾರಿಗೆ ಮೂರು ಬಾರಿ ತಲಾಖ್ ಎಂದು ಹೇಳಿ ವಿವಾಹವನ್ನು ಮುರಿದುಕೊಳ್ಳುವುದನ್ನು ಕ್ರಿಮಿನಲ್ ಅಪರಾಧವೆಂದು ಘೋಷಿಸಿದ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರು ಇರುವ ವಿಭಾಗೀಯ ಪೀಠವು ನಡೆಸುತ್ತಿದೆ. ವಿಚಾರಣೆಯನ್ನು ಮಾರ್ಚ್ 17ರಿಂದ ಶುರುವಾಗುವ ವಾರಕ್ಕೆ ನಿಗದಿಪಡಿಸಲಾಗಿದೆ.





