ಭೋಪಾಲ್: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮಸ್ಥಳ ಮಧ್ಯಪ್ರದೇಶದ ಮಹೂನಿಂದ ಜ. 27ರಂದು ಕಾಂಗ್ರೆಸ್ ತನ್ನ ರಾಷ್ಟ್ರವ್ಯಾಪಿ 'ಜೈ ಬಾಪು, ಜೈ ಭೀಮ್,ಜೈ ಸಂವಿಧಾನ' ಅಭಿಯಾನವನ್ನು ಪ್ರಾರಂಭಿಸಲಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಸಿಂಗ್ ಇಂದು (ಶನಿವಾರ) ತಿಳಿಸಿದ್ದಾರೆ.
ಅಂಬೇಡ್ಕರ್ ಅವರನ್ನು ಅಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕ್ಷಮೆಯಾಚಿಸಿ, ರಾಜೀನಾಮೆ ನೀಡುವವರೆಗೂ ಅಭಿಯಾನ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪ್ರಮುಖ ನೇತಾರರು ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
'ಸಂಸತ್ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಬಿಜೆಪಿ ಅವಹೇಳನಕಾರಿ ಪದಗಳ ಪ್ರಯೋಗ ಮಾಡುತ್ತಿದೆ. ಅವರಿಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ' ಎಂದು ಅವರು ಆರೋಪಿದ್ದಾರೆ.
'ಬಿಜೆಪಿಯ 'ಹಿಟ್ಲರ್' ಆಡಳಿತದಲ್ಲಿ ದೇಶದಾದ್ಯಂತ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ. ಮತ್ತೊಂದೆಡೆ ಜನರ ಹಕ್ಕುಗಳಿಗಾಗಿ ಮತ್ತು ಸಂವಿಧಾನ ರಕ್ಷಣೆಗಾಗಿ ಕಾಂಗ್ರೆಸ್ ಹೋರಾಡುತ್ತಿದೆ' ಎಂದು ಅವರು ತಿಳಿಸಿದರು.





