ಮಧೂರು: ದಕ್ಷಿಣ ಭಾರತದ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದಾದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಬ್ರಹ್ಮಕಲಶೋತ್ಸವ ಮತ್ತು ಮೂಡಪ್ಪ ಸೇವೆಯ ಯಶಸ್ವಿಗಾಗಿ ಸ್ವಯಂಸೇವಕರ ಪೂರ್ವಭಾವಿ ಸಮಾವೇಶ ದೇವಸ್ಥಾನ ವಠಾರದಲ್ಲಿ ಭಾನುವಾರ ಜರುಗಿತು.
ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಸಮಾರಂಭ ಉದ್ಘಾಟಿಸಿ ಆಶೀರ್ವಚನ ನೀಡಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಬಿ.ಎಸ್. ರಾವ್ ಅಧ್ಯಕ್ಷತೆ ವಹಿಸಿದ್ದರು. ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಿ, ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವೆಯ ಯಶಸ್ವಿಯಲ್ಲಿ ಸ್ವಯಂಸೇವಕರ ಪಾತ್ರ ಮಹತ್ತರವಾದುದು. ಸಮಾರಂಭದ ಅಚ್ಚುಕಟ್ಟುತನ ಹಾಗೂ ಕಾರ್ಯಕ್ರಮ ಅಯೋಜನೆ ಸಂದರ್ಭ ಸ್ವಯಂಸೇವಕರು ಹೆಚ್ಚಿನ ಕಾಳಜಿ ವಹಿಸಬೇಕಾದ ಅಗತ್ಯವಿದೆ ಎಂದು ತಿಳಿಸಿದರು.
ಈ ಸಂದರ್ಭ ಗೂಗಲ್ ನೋಂದವಣಾ ಫಾರ್ಮನ್ನು ಎಡನೀರುಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಬಿಡುಗಡೆಗೊಳಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಮುಂದಿನ ಕಾರ್ಯಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸೂಕ್ತ ಮಾರ್ಗದರ್ಶನ ನೀಡಿದರು.
ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಜಯದೇವ ಖಂಡಿಗೆ, ದೇವಸ್ಥಾನದ ಪವಿತ್ರಪಾಣಿ ರತನ್‍ಕುಮಾರ್ ಕಾಮಡ, ಮಧೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ ಕೂಡ್ಲು, ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು, ಮಂಜುನಾಥ ಕಾಮತ್ ಉಪಸ್ಥಿತರಿದ್ದರು. ಮಧೂರು ಬಾಲಗೋಕುಲ ಮಕ್ಕಳು ಪ್ರಾರ್ಥನೆ ಹಾಡಿದರು. ಸುನಿಲ್ ಕುಮಾರ್ ಕುದ್ರೆಪ್ಪಾಡಿ ಸ್ವಾಗತಿಸಿದರು. ಗಣೇಶ್ ಪಾರೆಕಟ್ಟ ಕಾರ್ಯಕ್ರಮ ನಿರೂಪಿಸಿದರು. ದಿನೇಶ್ ಬಂಬ್ರಾಣ ವಂದಿಸಿದರು. ಮಹಿಳೆಯರು ಸೇರಿದಂತೆ ನೂರರು ಮಂದಿ ಸ್ವಯಂಸೇವಕರು ಪಾಲ್ಗೊಂಡಿದ್ದರು.






