ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಮತ್ತು ಆಯುಕ್ತರ ನೇಮಕ ಸಂಬಂಧ ಕೇಂದ್ರ ಸರ್ಕಾರ 2023ರಲ್ಲಿ ಮಾಡಿರುವ ತಿದ್ದುಪಡಿಗಳನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇದೇ 12ಕ್ಕೆ ನಿಗದಿಪಡಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್.ಕೋಟಿಶ್ವರ್ ಸಿಂಗ್ ಅವರಿದ್ದ ಪೀಠವು, ಈ ಅರ್ಜಿಯ ಮಹತ್ವವನ್ನು ನಿರ್ಧರಿಸಲಾಗುವುದು ಎಂದು ತಿಳಿಸಿದೆ.
ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಪರ ಹಾಜರಾಗಿದ್ದ ವಕೀಲ ಪ್ರಶಾಂತ್ ಭೂಷಣ್, ಈ ಅರ್ಜಿಯ ವಿಚಾರಣೆಯನ್ನು ಫೆ.4ರಂದು ನಿಗದಿಪಡಿಸಲಾಗಿತ್ತು. ಆದರೆ, ಅಂದು ಇತರೆ ಪ್ರಕರಣಗಳು ವಿಚಾರಣೆಗೆ ಬಾಕಿ ಇರುವ ಕಾರಣ ಈ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇಲ್ಲ ಎಂದು ತಿಳಿಸಿದರು.
ಈ ಪ್ರಕರಣವು 2023ರ ಸಾಂವಿಧಾನಿಕ ಪೀಠದ ತೀರ್ಪನ್ನು ಒಳಗೊಂಡಿದೆ. ಜೊತೆಗೆ, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಫೆ.18ರಂದು ನಿವೃತ್ತಿ ಹೊಂದಲಿದ್ದಾರೆ ಎಂಬುದನ್ನು ಉಲ್ಲೇಖಿಸಿದ ಪ್ರಶಾಂತ್ ಭೂಷಣ್, ಈ ಅರ್ಜಿಯನ್ನು ಶೀಘ್ರವೇ ವಿಚಾರಣೆ ನಡೆಸಬೇಕು ಎಂದು ಕೋರಿದರು.




