ನವದೆಹಲಿ: ದೆಹಲಿ-ಎನ್‌ಸಿಆರ್‌ನ ಕೆಲವು ಭಾಗಗಳಲ್ಲಿ ಇಂದು (ಸೋಮವಾರ) ಮುಂಜಾನೆ 5:36ರ ವೇಳೆಗೆ ಪ್ರಬಲ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ. ಆದರೆ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
5 ಕಿಲೋಮೀಟರ್ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ಎನ್‌ಸಿಎಸ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ಧೌಲಾ ಕುವಾನ್‌ನಲ್ಲಿರುವ ದುರ್ಗಾಬಾಯಿ ದೇಶಮುಖ್ ಮಹಾವಿದ್ಯಾಲಯದ ಬಳಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಪ್ರತಿ ಎರಡರಿಂದ ಮೂರು ವರ್ಷಗಳಿಗೊಮ್ಮೆ ಲಘು, ಕಡಿಮೆ ತೀವ್ರತೆಯ ಭೂಕಂಪಗಳು ಸಂಭವಿಸುತ್ತಿವೆ. 2015ರಲ್ಲಿ ಇಲ್ಲಿ ಭೂಕಂಪ ಸಂಭವಿಸಿದ್ದು, 3.3 ತೀವ್ರತೆ ದಾಖಲಾಗಿತ್ತು ಎಂದು ಅವರು ಹೇಳಿದ್ದಾರೆ.
'ನೀವೆಲ್ಲರೂ ಸುರಕ್ಷಿತರಾಗಿದ್ದೀರಿ ಎಂದು ನಾವು ಭಾವಿಸುತ್ತೇವೆ. ತುರ್ತು ಅಗತ್ಯವಿದ್ದರೆ ನಾಗರಿಕರು 112 ಸಹಾಯವಾಣಿಗೆ ಕರೆ ಮಾಡುವಂತೆ' ದೆಹಲಿ ಪೊಲೀಸರು ಎಕ್ಸ್ ಪೋಸ್ಟ್‌ನಲ್ಲಿ ಮನವಿ ಮಾಡಿದ್ದಾರೆ.
ಎಚ್ಚರದಿಂದಿರಿ ಪ್ರಧಾನಿ ಮೋದಿ ಸಲಹೆ:
ರಾಷ್ಟ್ರ ರಾಜಧಾನಿ ಹಾಗೂ ಪಕ್ಕದ ಪ್ರದೇಶಗಳಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿದ ಬಗ್ಗೆ ವರದಿಯಾಗಿದೆ. ಈ ಪ್ರದೇಶಗಳ ಜನರು ಸುರಕ್ಷತಾ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು. ಜತೆಗೆ ಸಂಭವನೀಯ ಭೂಕಂಪಗಳ ಬಗ್ಗೆ ಎಚ್ಚರದಿಂದಿರಬೇಕು ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ.
ಭೂಮಿ ಕಂಪಿಸುತ್ತಿದ್ದಂತೆ ಭಾರೀ ಶಬ್ದ ಕೇಳಿ ಬಂದಿದೆ. ಇದರಿಂದ ಭಯಭೀತರಾದ ದೆಹಲಿ, ನೋಯ್ಡಾ, ಗ್ರೇಟರ್ ನೋಯ್ಡಾ ಮತ್ತು ಗಾಜಿಯಾಬಾದ್‌ನ ನಿವಾಸಿಗಳು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ದೆಹಲಿ-ಎನ್‌ಸಿಆರ್‌ನಲ್ಲಿ ಭೂಕಂಪ-ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದ ನಿವಾಸಿಗಳು
ದೆಹಲಿಯಲ್ಲಿ ಭೂಕಂಪ ಸಂಭವಿಸಿದೆ. ಎಲ್ಲರೂ ಸುರಕ್ಷಿತವಾಗಿರಲಿ ಎಂದು ನಾವು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹಾಗೂ ಮಾಜಿ ಸಿಎಂ ಅತಿಶಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.




