ಕಾಸರಗೋಡು: ಜಲಶಕ್ತಿ ಅಭಿಯಾನದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜರುಗಿತು. ಜಲ ಸಂರಕ್ಷಣಾ ಚಟುವಟಿಕೆಗಳಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ವಿವಿಧ ಇಲಾಖೆ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.
ಸಹಾಯಕ ಜಿಲ್ಲಾಧಿಕಾರಿ ಪಿ ಸುರ್ಜಿತ್ ಅಧ್ಯಕ್ಷತೆ ವಹಿಸಿದ್ದರು. ಭೂ ಮತ್ತು ಜಲ ಇಲಾಖೆ ಜಿಲ್ಲಾ ಅಧಿಕಾರಿ ಅರುಣ್ ದಾಸ್ ವರದಿ ಮಂಡಿಸಿದರು. ಸಣ್ಣ ನೀರಾವರಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಲಾಲಿ ಜಾರ್ಜ್, ಸಿಪಿಸಿಆರ್‍ಐ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಟಿ.ಎಸ್.ಮನೋಜ್ ಕುಮಾರ್, ಕೃಷಿ ಇಲಾಖೆ ಉಪನಿರ್ದೇಶಕಿ ಸ್ಮಿತಾ ನಂದಿನಿ ಹಸಿರು ಕೇರಳ ಮಿಷನ್ ಜಿಲ್ಲಾ ಸಂಯೋಜಕ ಕೆ.ಬಾಲಕೃಷ್ಣನ್ ಹಾಗೂ ಜಿಲ್ಲಾ ಮಟ್ಟದ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಅಂಗವಾಗಿ ಜಿಲ್ಲೆಯಲ್ಲಿ ಶೇ28 ಕ್ಷೇತ್ರಗಳಲ್ಲಿ ಜಲಸಂರಕ್ಷಣಾ ಕಾಮಗಾರಿ ಪೂರ್ಣಗೊಂಡಿದ್ದು, ಎಂಟು ಸ್ಥಳಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ನವಕೇರಳ ಕ್ರಿಯಾ ಯೋಜನೆಯ ಅಂಗವಾಗಿ ಜಲ ಸಂರಕ್ಷಣಾ ಕ್ರಮಗಳನ್ನು ಹೆಚ್ಚು ಪರಿಣಾಮಕಾರಿಯಾಗಿಸಲು ಕರಡು ರೂಪದಲ್ಲಿ ಜಲ ಸಂರಕ್ಷಣಾ ಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದು ಅರುಣ್ ದಾಸ್ ಸಭೆಗೆ ತಿಳಿಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳಿಂದ ಅನುಷ್ಠಾನಗೊಂಡಿರುವ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಲಾಯಿತು.




