ವಾಷಿಂಗ್ಟನ್: ಭಾರತ ಹಾಗೂ ಪಾಕಿಸ್ತಾನ ದೇಶಗಳ ಜೊತೆ ಸಂಪರ್ಕದಲ್ಲಿದ್ದು, ಈ ಬಿಕ್ಕಟ್ಟಿಗೆ 'ಜವಾಬ್ದಾರಿಯುತ ಪರಿಹಾರ' ಕಾಣಬೇಕು ಎಂದು ಅಮೆರಿಕದ ವಿದೇಶಾಂಗ ಇಲಾಖೆ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ನಡೆದ ಉಗ್ರರ ದಾಳಿ ಬೆನ್ನಲ್ಲೇ ಭಾರತ ಹಾಗೂ ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಅಮೆರಿಕ ಭಾರತವನ್ನು ಬೆಂಬಲಿಸಿತು. ಆದರೆ ಪಾಕಿಸ್ತಾನವನ್ನು ದೂರಲಿಲ್ಲ. ಮತ್ತೊಂದೆಡೆ ಭಾರತದ ಆರೋಪಗಳನ್ನು ನಿರಾಕರಿಸಿದ್ದ ಪಾಕಿಸ್ತಾನ ತಟಸ್ಥ ತನಿಖೆಯನ್ನು ಬಯಸಿತ್ತು.
ಭಾರತ ಹಾಗೂ ಪಾಕಿಸ್ತಾನ ನಡುವಣ ಬಿಕ್ಕಟ್ಟಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ನಾವು ಭಾರತ ಹಾಗೂ ಪಾಕಿಸ್ತಾನ ಸರ್ಕಾರಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.
ಉಭಯ ರಾಷ್ಟ್ರಗಳು ಒಗ್ಗಟ್ಟಾಗಿ ಕೆಲಸ ಮಾಡಿ ಬಿಕ್ಕಟ್ಟಿಗೆ ಜವಾಬ್ದಾರಿಯುತ ಪರಿಹಾರ ಕಾಣಬೇಕು ಎಂದು ಅಮೆರಿಕ ಬಯಸುತ್ತದೆ ಎಂದು ಅವರು ಹೇಳಿದ್ದಾರೆ.
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇವೆ. ಅಮೆರಿಕ ಭಾರತದ ಪರ ನಿಲ್ಲುತ್ತದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಹೇಳಿಕೆಯನ್ನು ವಿದೇಶಾಂಗ ಸಚಿವಾಲಯ ಪುನರುಚ್ಚರಿಸಿದೆ.




