ನವದೆಹಲಿ :ವಕ್ಫ್ (ತಿದ್ದುಪಡಿ) ಕಾಯ್ದೆ 2025 ರ ಹಿಂಸಾಚಾರದಲ್ಲಿ ಮುಳುಗಿರುವ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಬಿಎಸ್‌ಎಫ್ ಸಿಬ್ಬಂದಿಯ ಐದು ಹೆಚ್ಚುವರಿ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಶನಿವಾರ ತಿಳಿಸಿದ್ದಾರೆ.
ಮುರ್ಷಿದಾಬಾದ್‌ನಲ್ಲಿ ಸ್ಥಳೀಯವಾಗಿ ಲಭ್ಯವಿರುವ ಸುಮಾರು 300 ಬಿಎಸ್‌ಎಫ್ ಸಿಬ್ಬಂದಿಗಳ ಜೊತೆಗೆ ಐದು ಹೆಚ್ಚುವರಿ ತುಕಡಿಗಳನ್ನು ನಿಯೋಜಿಸಲಾಗಿದೆ.
ರಾಜ್ಯ ಸರ್ಕಾರದ ಕೋರಿಕೆಯ ಮೇರೆಗೆ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ (ಎಂಎಚ್‌ಎ) ಹೇಳಿಕೆಯಲ್ಲಿ ತಿಳಿಸಿದೆ.
ಹಿಂಸಾಚಾರದ ಬಗ್ಗೆ ಮೋಹನ್ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಅವರೊಂದಿಗೆ ವೀಡಿಯೊ ಕಾನ್ಫರೆನ್ಸ್ ನಡೆಸಿದರು. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುವಂತೆ ಮತ್ತು ಸಾಧ್ಯವಾದಷ್ಟು ಬೇಗ ಸಾಮಾನ್ಯ ಸ್ಥಿತಿಗೆ ಮರಳಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ಕೊಟ್ಟಿದ್ದಾರೆ.
ಕೇಂದ್ರವು ಪರಿಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಗೃಹ ಕಾರ್ಯದರ್ಶಿ ಅಧಿಕಾರಿಗಳಿಗೆ ತಿಳಿಸಿದರು, ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡುವುದಾಗಿ ಭರವಸೆ ನೀಡಿರುವುದಾಗಿ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಉದ್ವಿಗ್ನ ಪರಿಸ್ಥಿತಿಯ ಬಗ್ಗೆ ಡಿಜಿಪಿ ರಾಜೀವ್ ಕುಮಾರ್ ಗೃಹ ಕಾರ್ಯದರ್ಶಿಗೆ ಮಾಹಿತಿ ನೀಡಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ನಿಕಟವಾಗಿ ಮೇಲ್ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಸ್ಥಳೀಯವಾಗಿ ನಿಯೋಜಿಸಲಾದ ಬಿಎಸ್‌ಎಫ್ ಪಡೆಗಳು ಸಹಾಯ ಮಾಡಿದ್ದಾರೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ 150 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ವಕ್ಫ್ ಕಾಯ್ದೆಯ ವಿರುದ್ಧ ಪ್ರತಿಭಟನೆ
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಹೊಸ ವಕ್ಫ್ (ತಿದ್ದುಪಡಿ) ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದು ಹಿಂಸೆಗೆ ತಿರುಗಿದೆ. ಪ್ರತಿಭಟನೆಯಲ್ಲಿ ಕನಿಷ್ಠ ಮೂರು ಜನರು ಮೃತಪಟ್ಟಿದ್ದಾರೆ, ಹಲವಾರು ಜನರು ಗಾಯಗೊಂಡರು. ಸುತಿ ಮತ್ತು ಸಂಸರ್‌ಗಂಜ್ ಬ್ಲಾಕ್‌ಗಳಲ್ಲಿ ಪ್ರತಿಭಟನೆಗಳು ಹಿಂಸಾತ್ಮಕವಾಗಿ ತಿರುಗಿದ ನಂತರ ತಂದೆ-ಮಗ ಸೇರಿದಂತೆ ಕನಿಷ್ಠ ಮೂವರು ಜನರು ಸಾವನ್ನಪ್ಪಿದರು ಮತ್ತು 118 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.
ಪ್ರತಿಭಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಮತಾ ಬ್ಯಾನರ್ಜಿ, ಈ ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ, ರಾಜ್ಯ ಸರ್ಕಾರವಲ್ಲ ಎಂದಿದ್ದಾರೆ. "ನಾವು ಕಾನೂನನ್ನು ರಚನೆ ಮಾಡಿಲ್ಲ, ಅನೇಕರು ಕಾನೂನು ಬಗ್ಗೆ ಆಕ್ರೋಶಗೊಂಡಿದ್ದಾರೆ. ಕಾನೂನನ್ನು ಕೇಂದ್ರ ಸರ್ಕಾರ ಮಾಡಿದೆ. ಆದ್ದರಿಂದ, ನೀವು ಬಯಸುವ ಉತ್ತರವನ್ನು ಕೇಂದ್ರ ಸರ್ಕಾರದಿಂದ ಪಡೆಯಬೇಕು. ಈ ವಿಷಯದ ಬಗ್ಗೆ ನಾವು ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದೇವೆ, ಕಾಯ್ದೆಗೆ ನಾವು ಬೆಂಬಲ ಕೊಡುವುದಿಲ್ಲ, ಕಾನೂನನ್ನು ನಮ್ಮ ರಾಜ್ಯದಲ್ಲಿ ಜಾರಿಗೆ ತರಲಾಗುವುದಿಲ್ಲ. ಹಾಗಾದರೆ ಗಲಭೆ ಮಾಡುತ್ತಿರುವುದೇಕೆ?" ಎಂದು ಪ್ರಶ್ನೆ ಮಾಡಿದ್ದಾರೆ.

