ಲಖನೌ: ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ ಭಯೋತ್ಪಾದಕರು ದಾಳಿ ನಡೆಸುತ್ತಿದ್ದಾರೆ ಎಂಬ ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ ಆರೋಪದಡಿ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಆರೋಪಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಗುಂಡಿನ ಶಬ್ಧದೊಂದಿಗೆ ಸಂಯೋಜನೆಗೊಂಡಿರುವ ವಿಡಿಯೊಗಳನ್ನು ಪೋಸ್ಟ್ ಮಾಡಿ, ಜನರಲ್ಲಿ ಆತಂಕ ಸೃಷ್ಟಿಸಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರಾಜೇಶ್ ದ್ವಿವೇದಿ ಹೇಳಿದ್ದಾರೆ.
ಇನ್‌ಸ್ಟಾಗ್ರಾಮ್ ಖಾತೆದಾರ ಅಂಕಿತ್ ಕುಮಾರ್, ಪರ್ವಿಂದರ್ ಮತ್ತು ಮತ್ತೊಬ್ಬ ವ್ಯಕ್ತಿಯ ವಿರುದ್ಧವೂ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಯಿತು. ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ದ್ವಿವೇದಿ ತಿಳಿಸಿದ್ದಾರೆ.
'ಸಾಮಾಜಿಕ ಮಾಧ್ಯಮವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದ್ದು, ಸಾಮಾಜಿಕ ಮಾಧ್ಯಮದಲ್ಲಿ ದಾರಿತಪ್ಪಿಸುವ ನಕಲಿ ವದಂತಿಗಳನ್ನು ಜನರು ನಂಬಬಾರದು ಎಂದು ದ್ವಿವೇದಿ ಮನವಿ ಮಾಡಿದ್ದಾರೆ.
'ನಕಲಿ ಪೋಸ್ಟ್‌ಗಳನ್ನು ಪೋಸ್ಟ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು' ಎಂದು ದ್ವಿವೇದಿ ಹೇಳಿದ್ದಾರೆ.




