ನವದೆಹಲಿ: ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ (ಎನ್‌ಎಎಲ್‌ಎಸ್‌ಎ) ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ.
ಎನ್‌ಎಎಲ್‌ಎಸ್‌ಎ ಈ ಕುರಿತು ಪತ್ರಿಕಾ ಹೇಳಿಕೆ ನೀಡಿದೆ. ರಾಷ್ಟ್ರಪತಿ ಅವರು ನೇಮಕ ಮಾಡಿರುವ ಕುರಿತು ಕಾನೂನು ಸಚಿವಾಲಯವು ಮೇ 9ರಂದು ಅಧಿಸೂಚನೆ ಹೊರಡಿಸಿದೆ ಎಂದು ತಿಳಿಸಿದೆ.
ಈ ಮೊದಲು ನ್ಯಾಯಮೂರ್ತಿ ಬಿ.ಆರ್.ಗವಾಯಿ ಈ ಸ್ಥಾನದಲ್ಲಿದ್ದರು. ಸಂಪ್ರದಾಯದಂತೆ ಸುಪ್ರೀಂ ಕೋರ್ಟ್‌ನ ಎರಡನೇ ಅತಿ ಹಿರಿಯ ನ್ಯಾಯಮೂರ್ತಿಯವರನ್ನು ಈ ಸ್ಥಾನಕ್ಕೆ ನೇಮಿಸಲಾಗುತ್ತದೆ.
ಗವಾಯಿ ಅವರು ಇದೇ 14ರಂದು ಸುಪ್ರೀಂ ಕೋರ್ಟ್‌ನ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಪ್ರಸ್ತುತ ಸುಪ್ರೀಂ ಕೋರ್ಟ್‌ನ ಕಾನೂನು ಸೇವಾ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.




