ನವದೆಹಲಿ: ಭಾರತ ಮತ್ತು ಪಾಕಿಸ್ತಾನಗಳು ಕದನ ವಿರಾಮಕ್ಕೆ ಒಪ್ಪಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ಕರೆಯುವಂತೆ ಕಾಂಗ್ರೆಸ್ ಒತ್ತಾಯಿಸಿದೆ.
ಪಹಲ್ಗಾಮ್ ದಾಳಿ ನಂತರದ 18 ದಿನಗಳ ಬೆಳವಣಿಗೆಗಳ ಬರ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯುವಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಒತ್ತಾಯಿಸಿದ್ದಾರೆ.
ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಭಾರತ ಮತ್ತು ಪಾಕಿಸ್ತಾನಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷರು ಪ್ರಕಟಿಸಿರುವ ಹಿನ್ನೆಲೆಯಲ್ಲಿ, ಪ್ರಧಾನಿ ಮೋದಿ ಅವರು ತಮ್ಮ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ ಕರೆದು ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಅಗತ್ಯ ಈಗ ಮೊದಲಿಗಿಂತ ಹೆಚ್ಚಾಗಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.
ಇಂದು ಮಧ್ಯಾಹ್ನ ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು(ಡಿಜಿಎಂಒ) ಭಾರತ ಡಿಜಿಎಂಒ ಅವರೊಂದಿಗೆ ಮಾತುಕತೆ ನಡೆಸಿದ್ದು, ಭಾರತೀಯ ಕಾಲಮಾನ 5 ಗಂಟೆಯಿಂದ ಜಾರಿಗೆ ಬರುವಂತೆ ಭೂ, ವಾಯು ಮತ್ತು ನೌಕಾ ಪಡೆಯ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಶನಿವಾರ ಸಂಜೆ ಹೇಳಿದರು.




