ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.
ಗುರುವಾರ ಬೆಳಗ್ಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿತ್ತು.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪ್ರದೇಶದ ನಾದರ್ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ನಿರ್ದಿಷ್ಟ ಮಾಹಿತಿ ಪಡೆದ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದವು ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಪ್ರತಿದಾಳಿ ನಡೆಸಿದರು ಎಂದು ಪೊಲೀಸರು ಹೇಳಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಮೃತಪಟ್ಟಿದ್ದಾರೆ. ಯೋಧರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.





