ನವದೆಹಲಿ: ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಅಧಿಕೃತ ನಿವಾಸದಲ್ಲಿ ನೋಟುಗಳ ಕಂತೆ ಪತ್ತೆಯಾದ ಪ್ರಕರಣ ಕುರಿತು ಸುಪ್ರೀಂ ಕೋರ್ಟ್ ನೇಮಿಸಿದ್ದ ತ್ರಿಸದಸ್ಯ ಸಮಿತಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರಿಗೆ ತನ್ನ ತನಿಖಾ ವರದಿಯನ್ನು ಸಲ್ಲಿಸಿದೆ.
ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಿ.ಎಸ್. ಸಂಧವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಅನು ಶಿವರಾಮನ್ ಅವರನ್ನು ಒಳಗೊಂಡ ಮೂವರು ಸದಸ್ಯರ ಸಮಿತಿಯು ಮೇ 3ರಂದು ತನ್ನ ವರದಿಯನ್ನು ಅಂತಿಮಗೊಳಿಸಿತ್ತು.
ಮಾರ್ಚ್ 14 ರಂದು ರಾತ್ರಿ 11.35ರ ಸುಮಾರಿಗೆ ನ್ಯಾಯಮೂರ್ತಿ ವರ್ಮಾ ಅವರ ನಿವಾಸದಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಅಲ್ಲಿಗೆ ಧಾವಿಸಿದ್ದರು. ಆ ವೇಳೆ ನಿವಾಸದಲ್ಲಿ ಭಾರಿ ಪ್ರಮಾಣದಲ್ಲಿ ನಗದು ಪತ್ತೆಯಾಗಿತ್ತು ಎನ್ನಲಾಗಿದೆ.
ನ್ಯಾಯಮೂರ್ತಿ ವರ್ಮಾ ಅವರ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಲು ರಚಿಸಲಾದ ತ್ರಿಸದಸ್ಯ ಸಮಿತಿ ಮೇ 4 ರಂದು ಮುಖ್ಯ ನ್ಯಾಯಮೂರ್ತಿಗಳಿಗೆ ತನ್ನ ವರದಿಯನ್ನು ಸಲ್ಲಿಸಿದೆ ಎಂದು ಸುಪ್ರೀಂ ಕೋರ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.




