ಉಪ್ಪಳ: ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರಸ್ತೆ ಕುಸಿತ ಉಂಟಾಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಜಿಲ್ಲೆಯ ಎತ್ತರದ ಪ್ರದೇಶಗಳಲ್ಲಿ ಹಲವಾರು ಸ್ಥಳಗಳಲ್ಲಿ ಭೂಕುಸಿತ ಸಂಭವಿಸಿದೆ. ನಿರ್ಮಾಣ ಹಂತದಲ್ಲಿರುವ ರಾಷ್ಟ್ರೀಯ ಹೆದ್ದಾರಿ 66 ರ ಹಲವು ಭಾಗಗಳಲ್ಲಿ ಭೂಕುಸಿತ ಮತ್ತು ಗುಡ್ಡದ ನೀರು ಹರಿಯುತ್ತಿರುವುದರಿಂದ ಸಂಚಾರ ಅಸ್ತವ್ಯಸ್ತವಾಗಿದೆ.
ಚಟ್ಟಂಚ್ಚಾಲ್‍ನ ದಕ್ಷಿಣ ತಿರುವಿನಲ್ಲಿ ಭೂಕುಸಿತ ಸಂಭವಿಸಿದ ಕಾರಣ ಶುಕ್ರವಾರ ಬೆಳಿಗ್ಗೆಯಿಂದ ಈ ಮಾರ್ಗದಲ್ಲಿ ಸಂಚಾರವನ್ನು ನಿಷೇಧಿಸಲಾಗಿದೆ. ಗುಡ್ಡಗಾಡು ಹೆದ್ದಾರಿಯಲ್ಲಿ ನಂದರಪದವು-ಚೇವಾರ್ ಮಾರ್ಗದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ ಕಾರಣ ಈ ಮಾರ್ಗದಲ್ಲಿ ಸಂಚಾರವನ್ನು ನಿಷೇಧಿಸಲಾಗಿದೆ. ವಾಹನಗಳು ಮೀಯಪದವು, ಪೈವಳಿಕೆ ಉಪ್ಪಳ ಮಾರ್ಗದ ಮೂಲಕ ಸಂಚರಿಸಬೇಕು ಎಂದು ಲೋಕೋಪಯೋಗಿ ರಸ್ತೆ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.
ಕರಿಯಂಗೋಡ್, ಚಂದ್ರಗಿರಿ ಮತ್ತು ಕುಂಬಳೆ ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಕೆಲವು ಪ್ರದೇಶಗಳಲ್ಲಿ ಜನರು ಸಂಬಂಧಿಕರ ಮನೆಗಳಿಗೆ ಸ್ಥಳಾಂತರಗೊಂಡಿದ್ದಾರೆ. ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ಇರುವುದರಿಂದ ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಟ್ಟಿವೆ.




