ನಾರಾಯಣಪುರ: ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ಇಂದು (ಬುಧವಾರ) ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 27 ನಕ್ಸಲರು ಹತ್ಯೆಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ನಕ್ಸಲ್ ನಾಯಕ ಬಸವರಾಜು ಸಹ ಹತ್ಯೆಗೀಡಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಎನ್‌ಕೌಂಟರ್‌ನಲ್ಲಿ ರಾಜ್ಯ ಪೊಲೀಸ್‌ನ ಜಿಲ್ಲಾ ಮೀಸಲು ಪಡೆಯ (ಡಿಆರ್‌ಜಿ) ಒಬ್ಬ ಸಿಬ್ಬಂದಿ ಹುತಾತ್ಮರಾಗಿದ್ದು, ಇನ್ನು ಕೆಲವು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಂಬಲ ಕೇಶವ ರಾವ್ ಅಲಿಯಾಸ್ ಬಸವರಾಜು 1960ರ ದಶಕದ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ (ಮಾವೋವಾದಿ) ಸಂಘಟನೆಯ ಪ್ರಧಾನ ಕಾರ್ಯದರ್ಶಿ ಆಗಿದ್ದರು ಎನ್ನಲಾಗಿದೆ.
ಉನ್ನತ ನಕ್ಸಲ್ ನಾಯಕನ ಹತ್ಯೆ ಮಾಡುವ ಮೂಲಕ ಐತಿಹಾಸಿಕ ಯಶಸ್ಸು ದೊರಕಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆದರೆ ಕಾರ್ಯಾಚರಣೆಯ ಸಂಬಂಧ ಹೆಚ್ಚಿನ ವಿವರಗಳನ್ನು ನೀಡಲು ನಿರಾಕರಿಸಿದ್ದಾರೆ. ನಕ್ಸಲ್ ನಾಯಕನ ಸಾವನ್ನು ಪೊಲೀಸರು ಇನ್ನಷ್ಟೇ ದೃಢೀಕರಿಸಬೇಕಿದೆ.
ನಾರಾಯಪುರ-ಬಿಜಾಪುರ-ದಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ದಟ್ಟಾರಣ್ಯ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ. ನಕ್ಸಲರ ಇರುವಿಕೆಯ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಭದ್ರತಾ ಪಡೆ ಕಾರ್ಯಾಚರಣೆಯನ್ನು ನಡೆಸಿತ್ತು.
ಕಾರ್ಯಾಚರಣೆ ಈಗಲೂ ಮುಂದುವರಿದಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.




