ಮುಂಬೈ: ದೇಶಭಕ್ತಿ, ಶಿಸ್ತು ಮತ್ತು ನಿಯಮಿತ ದೈಹಿಕ ವ್ಯಾಯಾಮದ ಅಭ್ಯಾಸವನ್ನು ಉತ್ತೇಜಿಸುವ ಸಲುವಾಗಿ ಮಹಾರಾಷ್ಟ್ರದಲ್ಲಿ 1ನೇ ತರಗತಿಯಿಂದ ವಿದ್ಯಾರ್ಥಿಗಳಿಗೆ ಮೂಲಭೂತ ಮಿಲಿಟರಿ ತರಬೇತಿಯನ್ನು ನೀಡಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಸಚಿವ ದಾದಾ ಭೂಸೆ ಹೇಳಿದ್ದಾರೆ.
ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ನಿವೃತ್ತ ಸೈನಿಕರನ್ನು ನೇಮಿಸಿಕೊಳ್ಳಲಾಗುವುದು ಎಂದು ಅವರು ಹೇಳಿದರು.
'1ನೇ ತರಗತಿಯ ವಿದ್ಯಾರ್ಥಿಗಳಿಗೆ ಮೂಲಭೂತ ಮಿಲಿಟರಿ ತರಬೇತಿಯನ್ನು ನೀಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದು ದೇಶ ಪ್ರೇಮವನ್ನು ಬೆಳೆಸಲು, ನಿಯಮಿತವಾಗಿ ದೈಹಿಕ ವ್ಯಾಯಾಮ ಮಾಡುವಂತಹ ಅಭ್ಯಾಸಗಳನ್ನು ಪ್ರೋತ್ಸಾಹಿಸಲು ಮತ್ತು ವಿದ್ಯಾರ್ಥಿಗಳಿಗೆ ಪ್ರಯೋಜನಕಾರಿಯಾದ ಶಿಸ್ತನ್ನು ಪ್ರೋತ್ಸಾಹಿಸಲು ಸಹಾಯ ಮಾಡುತ್ತದೆ'ಎಂದು ಭೂಸೆ ಹೇಳಿದರು.
ಮುಖ್ಯಮಂತ್ರಿ ದೇವೇಂದ್ರ ಫಢಣವೀಸ್ ಈ ಪ್ರಸ್ತಾವನೆಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದೂ ಅವರು ಹೇಳಿದರು.
ಪ್ರಸ್ತಾವನೆಯನ್ನು ಕಾರ್ಯಗತಗೊಳಿಸಲು, ಕ್ರೀಡಾ ಶಿಕ್ಷಕರು, ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ), ಸ್ಕೌಟ್ಸ್ ಮತ್ತು ಗೈಡ್ಸ್ ಜೊತೆಗೆ 2.5 ಲಕ್ಷ ಮಾಜಿ ಸೈನಿಕರ ನೆರವನ್ನು ಪಡೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

