HEALTH TIPS

ಏರ್ ಇಂಡಿಯಾ ವಿಮಾನ ದುರಂತ: ಮರಳು ಕಲಾಕೃತಿ ರಚಿಸಿ ಶ್ರದ್ಧಾಂಜಲಿ ಸಲ್ಲಿಸಿದ ಕಲಾವಿದ

ನವದೆಹಲಿ: ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ್ದ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 270ಕ್ಕೆ ಏರಿಕೆಯಾಗಿದೆ. 

ಖ್ಯಾತ ಮರಳು ಕಲಾವಿದ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿಯ ಸಮುದ್ರ ತೀರದಲ್ಲಿ ಕಲಾಕೃತಿಯನ್ನು ರಚಿಸುವ ಮೂಲಕ ವಿಮಾನ ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಇದರ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

'ದುರದೃಷ್ಟಕರ ಘಟನೆಯಲ್ಲಿ ಅನೇಕರು ಪ್ರಾಣ ಕಳೆದುಕೊಂಡಿದ್ದರಿಂದ ಇಡೀ ಜಗತ್ತು ತೀವ್ರ ಆಘಾತದಲ್ಲಿದೆ. ವಿಮಾನದಲ್ಲಿದ್ದ ಪ್ರಯಾಣಿಕರ ಜತೆಗೆ ಎಂಬಿಬಿಎಸ್‌ ವಿದ್ಯಾರ್ಥಿಗಳು ಸೇರಿದಂತೆ ಹಲವರು ಮೃತಪಟ್ಟಿರುವುದು ತುಂಬಾ ನೋವಿನ ಸಂಗತಿ. ಭಾರತದಲ್ಲಿ ಮಾತ್ರವಲ್ಲದೆ ಜಗತ್ತಿನ ಎಲ್ಲಿಯೂ ಇಂತಹ ದುರಂತ ಮತ್ತೆಂದೂ ಸಂಭವಿಸದಿರಲಿ ಎಂದು ಜಗನ್ನಾಥನಲ್ಲಿ ಪ್ರಾರ್ಥಿಸುವುದಷ್ಟೇ ನಾನು ಮಾಡಬಲ್ಲೆ' ಎಂದು ಸುದರ್ಶನ್ ಪಟ್ನಾಯಕ್ ಹೇಳಿದ್ದಾರೆ.

ಜೂನ್‌ 12ರಂದು (ಗುರುವಾರ) ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನವು ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು, ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿ ಸೇರಿದಂತೆ ಕನಿಷ್ಠ 270 ಮಂದಿ ಮೃತಪಟ್ಟಿದ್ದರು.

ವಿಮಾನ ಅಪಘಾತದಲ್ಲಿ ಬದುಕುಳಿದ ಏಕೈಕ ಪ್ರಯಾಣಿಕ ವಿಶ್ವಾಸ್‌ ಕುಮಾರ್ ರಮೇಶ್‌ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries