ಪುಣೆ: ಇಲ್ಲಿನ ರಾಜೀವ್ ಗಾಂಧಿ ಪ್ರಾಣಿ ಸಂಗ್ರಹಾಲಯದಲ್ಲಿ ಕಳೆದ ನಾಲ್ಕೈದು ದಿನಗಳಲ್ಲಿ 14 ಜಿಂಕೆಗಳು ಮೃತಪಟ್ಟಿರುವುದಾಗಿ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
'ಆಹಾರದ ಮೂಲಕ ಸೋಂಕು ಹರಡುವ ಸಾಧ್ಯತೆಯಿದ್ದು, ಆ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ರೋಗ ಹರಡುವ ವಿವಿಧ ಸಾಧ್ಯತೆಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ' ಎಂದು ಪುಣೆ ಮಹಾನಗರ ಪಾಲಿಕೆಯ ಪಶುವೈದ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವೈದ್ಯಕೀಯ ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ ಎಂದು ಅವರು ಹೇಳಿದ್ದಾರೆ.
'ಕಳೆದ ನಾಲ್ಕೈದು ದಿನಗಳಿಂದ ಜಿಂಕೆಗಳು ಒಂದೊಂದಾಗಿ ಸಾಯುತ್ತಿವೆ. ಮಂಗಳವಾರ ಯಾವುದೇ ಸಾವು ವರದಿಯಾಗಿಲ್ಲ. ಈವರಗೆ ಒಟ್ಟು 14 ಜಿಂಕೆಗಳು ಮೃತಪಟ್ಟಿವೆ. ಸಾವಿಗೆ ಕಾರಣವೇನು ಎಂದು ತಿಳಿದುಬಂದಿಲ್ಲ' ಎಂದು ಪ್ರಾಣಿ ಸಂಗ್ರಹಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಏತನ್ಮಧ್ಯೆ, ಮಹಾರಾಷ್ಟ್ರ ಮೃಗಾಲಯ ಪ್ರಾಧಿಕಾರದ ಅಧಿಕಾರಿಗಳು ಪ್ರಾಣಿ ಸಂಗ್ರಹಾಲಯಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.




