ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿರುವ ಕಾಲೇಜೊಂದರ ಆವರಣದಲ್ಲಿ ವಾಯುಪಡೆಯ ತರಬೇತಿ ವಿಮಾನ ಪತನಗೊಂಡಿದ್ದು, 19 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಬಾಂಗ್ಲಾದ ವಾಯುಪಡೆಯ F-7 BGI ತರಬೇತಿ ವಿಮಾನವು ಮಧ್ಯಾಹ್ನ 1 ಗಂಟೆ ಸುಮಾರಿಗೆ ಉತ್ತರದಲ್ಲಿ ಪತನಗೊಂಡಿದೆ ಎಂದು ಸೇನೆ ಪ್ರಕಟಣೆಯಲ್ಲಿ ತಿಳಿಸಿದೆ.
ಘಟನಾ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟವಾದ ಹೊಗೆ ಆವರಿಸಿದೆ. ಘಟನೆಯ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
ವಿಮಾನವು ಕಾಲೇಜಿನ ಕ್ಯಾಂಟೀನ್ ಮೇಲೆ ಪತನಗೊಂಡಿದೆ. ಗಾಯಾಳುಗಳನ್ನು ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜೂನ್ 12ರಂದು ನೆರೆಯ ಭಾರತದ ಅಹಮದಾಬಾದ್ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ತೆರಳಲು ಏರ್ ಇಂಡಿಯಾ ವಿಮಾನ (ಬೋಯಿಂಗ್ 787 ಡ್ರೀಮ್‌ಲೈನರ್) ಟೇಕ್-ಆಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘಾನಿನಗರದ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ಗೆ ಅಪ್ಪಳಿಸಿತ್ತು. ವಿಮಾನದಲ್ಲಿದ್ದ 241 ಪ್ರಯಾಣಿಕರು, ಸಿಬ್ಬಂದಿ ಹಾಗೂ ಘಟನಾ ಸ್ಥಳದಲ್ಲಿದ್ದ 19 ಮಂದಿ ಮೃತಪಟ್ಟಿದ್ದರು. ಪ್ರಯಾಣಿಕರೊಬ್ಬರು ಅಪಾಯದಿಂದ ಪಾರಾಗಿದ್ದರು.




