ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 23ರಿಂದ 26ರವರೆಗೆ ಬ್ರಿಟನ್ ಮತ್ತು ಮಾಲ್ದೀವ್ಸ್‌ಗೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಭಾನುವಾರ ತಿಳಿಸಿದೆ.
ಜು.23ರಂದು ಪ್ರಧಾನಿ ಕೀರ್ ಸ್ಟಾರ್ಮರ್ ಆಹ್ವಾನದ ಮೇರೆಗೆ ಮೋದಿ ಅವರು ಬ್ರಿಟನ್‌ಗೆ ಭೇಟಿ ನೀಡಲಿದ್ದಾರೆ.
ಬಳಿಕ ಜು.25ರಂದು ಮಾಲ್ದೀವ್ಸ್‌ಗೆ ತೆರಳಲಿರುವ ಮೋದಿ ಅವರು ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಮೂಲಗಳು ತಿಳಿಸಿವೆ.
'ಮೋದಿ ಅವರು ಪ್ರಧಾನಿಯಾದ ಬಳಿಕ ಬ್ರಿಟನ್‌ಗೆ ಕೈಗೊಳ್ಳುತ್ತಿರುವ ನಾಲ್ಕನೇ ಪ್ರವಾಸ ಇದಾಗಿದೆ. ಭಾರತ ಮತ್ತು ಬ್ರಿಟನ್ ನಡುವಿನ ದ್ವಿಪಕ್ಷೀಯ ಸಂಬಂಧಗಳ ಕುರಿತು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ವ್ಯಾಪಕ ಚರ್ಚೆ ನಡೆಸಲಿದ್ದಾರೆ. ಜತೆಗೆ, ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳು ಸೇರಿದಂತೆ ವ್ಯಾಪಾರ, ತಂತ್ರಜ್ಞಾನ, ರಕ್ಷಣೆ, ಹವಾಮಾನ, ಆರೋಗ್ಯ, ಶಿಕ್ಷಣ ಕ್ಷೇತ್ರದ ಬಗ್ಗೆ ಉಭಯ ನಾಯಕರು ಮಾತುಕತೆ ನಡೆಸಲಿದ್ದಾರೆ. ಇದೇ ವೇಳೆ ಮೋದಿ ಅವರು ಬ್ರಿಟನ್‌ನ ರಾಜ ಚಾರ್ಲ್ಸ್ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ' ಎಂದು ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಮೋದಿ ಅವರು ಪ್ರಧಾನಿಯಾದ ಬಳಿಕ ಮೂರನೇ ಬಾರಿಗೆ ಮಾಲ್ದೀವ್ಸ್ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಮೋದಿ ಅವರು ಜುಲೈ 26ರಂದು 60ನೇ ಮಾಲ್ದೀವ್ಸ್ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಬಳಿಕ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರೊಂದಿಗೆ ದ್ವಿಪಕ್ಷೀಯ ಸಂಬಂಧಗಳ ಕುರಿತು ಮಾತುಕತೆ ನಡೆಸಲಿದ್ದಾರೆ.

