ವಿರುಧುನಗರ: ಶಿವಕಾಶಿಯ ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 5 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡಿದ್ದಾರೆ.
ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ. ಕಾರ್ಮಿಕರು ಘಟಕದಲ್ಲಿ ಕೆಲಸ ಮಾಡುತ್ತಿದ್ದಾಗ ದಿಢೀರ್ ಸ್ಫೋಟ ಸಂಭವಿಸಿದೆ.
ಕಟ್ಟಡದಿಂದ ಎದ್ದ ದಟ್ಟ ಹೊಗೆ ಬಹು ದೂರದವರೆಗೆ ಕಾಣಿಸುತ್ತಿತ್ತು. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು. 'ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ನಿಯಂತ್ರಣಕ್ಕೆ ಬಂದಿದೆ' ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಟಾಕಿ ತಯಾರಿಕಾ ಘಟಕವು, ಶಿವಕಾಶಿ ಸಮೀಪದ ಚಿನ್ನಕಮನಪಟ್ಟಿಯಲ್ಲಿದ್ದು, ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.




