ಕೊಹಿಮಾ: ಕಳೆದೆರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಾಗಾಲ್ಯಾಂಡ್‌ನಾದ್ಯಂತ ಪ್ರವಾಹ ಉಂಟಾಗಿದ್ದು, ಮಹಿಳೆ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಕೊಹಿಮಾ-ದಿಮಾಪುರ್ ರಾಷ್ಟ್ರೀಯ ಹೆದ್ದಾರಿ 29ರಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಿಮಾಪುರದಲ್ಲಿ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸೇರಿದಂತೆ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪ್ರವಾಹದಿಂದಾಗಿ ಬರ್ಮಾ ಕ್ಯಾಂಪ್ ಮತ್ತು ಕುಡಾ ಗ್ರಾಮದ ವಸತಿ ಪ್ರದೇಶಗಳಿಗೆ ನೀರು ನುಗ್ಗಿದ್ದು, ಎದೆಮಟ್ಟದ ನೀರಿನಲ್ಲಿ ಜನರು ಓಡಾಡುತ್ತಿರುವುದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.
ಭಾರಿ ಮಳೆಯಿಂದಾಗಿ ರನ್‌ವೇ ಮತ್ತು ಪಾರ್ಕಿಂಗ್ ಪ್ರದೇಶಕ್ಕೆ ನೀರು ನುಗ್ಗಿರುವುದರಿಂದ ದಿಮಾಪುರ್ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಂಡಿಗೊ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸೇರಿದಂತೆ ಹಲವು ವಿಮಾನಗಳನ್ನು ರದ್ದುಗೊಳಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸುವಂತೆ ಪ್ರಯಾಣಿಕರಿಗೆ ಸೂಚನೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಭಾರಿ ಮಳೆಯಿಂದಾಗಿ ಕೊಹಿಮಾ-ದಿಮಾಪುರ್ ರಾಷ್ಟ್ರೀಯ ಹೆದ್ದಾರಿ 29ರಲ್ಲಿ ಭೂಕುಸಿತ ಉಂಟಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ದಿಮಾಪುರ್, ಕೊಹಿಮಾ ಮತ್ತು ನಿಯುಲ್ಯಾಂಡ್ ಹೆಚ್ಚು ಹಾನಿಗೊಳಗಾದ ಜಿಲ್ಲೆಗಳಾಗಿದ್ದು, ಸೇತುವೆಗಳು ಮುಳುಗಡೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.




