ನವದೆಹಲಿ: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ರಾಜೀನಾಮೆಯಿಂದಾಗಿ ತೆರೆವಾದ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು, ಲೋಕಸಭೆ ಹಾಗೂ ರಾಜ್ಯಸಭಾ ಸದಸ್ಯರನ್ನೂ ಒಳಗೊಂಡು ಒಟ್ಟು ಮತದಾರರ ಪಟ್ಟಿ ಹಾಗೂ ಮತಗಳ ಮೌಲ್ಯಗಳ ಲೆಕ್ಕಾಚಾರವನ್ನು ಆರಂಭಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
'ಪೂರ್ವಸಿದ್ಧತೆ ಪೂರ್ಣಗೊಂಡ ಬಳಿಕ ಉಪ ರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿಯನ್ನು ಆದಷ್ಟು ಬೇಗ ಘೋಷಿಸಲಾಗುವುದು' ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ವೈದ್ಯಕೀಯ ಕಾರಣಗಳನ್ನು ನೀಡಿ ಸೋಮವಾರದಂದು (ಬುಲೈ 21) ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಿದ್ದು, 'ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿದ್ದೇನೆ' ಎಂದು ತಿಳಿಸಿದ್ದರು.
'ಆರೋಗ್ಯದ ಮೇಲೆ ಹೆಚ್ಚಿನ ಗಮನಹರಿಸಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿ ತಕ್ಷಣವೇ ಜಾರಿಗೆ ಬರುವಂತೆ ಭಾರತದ ಉಪ ರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ' ಎಂದು ರಾಷ್ಟ್ರಪತಿ ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದರು.
74 ವರ್ಷದ ಧನಕರ್ ಅವರು 2022ರ ಆಗಸ್ಟ್‌ನಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಅವರ ಅಧಿಕಾರಾವಧಿ 2027ರ ಆಗಸ್ಟ್ 10ವರೆಗೂ ಇತ್ತು. ರಾಜ್ಯಸಭೆಯ ಸಭಾಪತಿಯೂ ಆಗಿರುವ ಅವರು ಸೋಮವಾರ ಆರಂಭವಾದ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಕಲಾಪದಲ್ಲಿ ಪಾಲ್ಗೊಂಡಿದ್ದರು.




