ಪಟ್ನಾ: ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದ್ದ ಗ್ಯಾಂಗ್‌ಸ್ಟರ್ ಚಂದನ್ ಮಿಶ್ರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೇರಿದಂತೆ ಆತನ ಮೂವರು ಸಹಚರರನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ.
ಕೋಲ್ಕತ್ತದಲ್ಲಿ ಬಿಹಾರ ಮತ್ತು ಪಶ್ಚಿಮ ಬಂಗಾಳದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಪ್ರಮುಖ ಆರೋಪಿ ತೌಸೀಫ್ ಅಲಿಯಾಸ್ ಬಾದ್‌ಶಾ, ಆತನ ಸಹಚರ ನಿಶು ಖಾನ್ ಸೇರಿದಂತೆ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಸ್ತ್ರಾಸ್ತ್ರಗಳ ಕಾಯ್ದೆಯಡಿ ಹಲವು ಪ್ರಕರಣಗಳಲ್ಲಿ ತೌಸೀಫ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಸದ್ಯ ಬಂಧಿತ ನಾಲ್ವರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲಾಗಿದೆ ಎಂದು ಪಟ್ನಾ ಪೊಲೀಸ್ ಅಧಿಕಾರಿ ಕಾರ್ತಿಕೇಯ ಶರ್ಮಾ ಮಾಹಿತಿ ನೀಡಿದ್ದಾರೆ.
12ಕ್ಕೂ ಹೆಚ್ಚು ಕೊಲೆ ಪ್ರಕರಣಗಳು ಸೇರಿದಂತೆ 24 ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಚಂದನ್ ಮಿಶ್ರಾನನ್ನು ಬೇವೂರ್ ಜೈಲಿನಲ್ಲಿ ಇರಿಸಲಾಗಿತ್ತು. ಈಚೆಗೆ ಮಿಶ್ರಾ ಆರೋಗ್ಯ ತಪಾಸಣೆಗಾಗಿ ಪೆರೋಲ್ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ. ಜುಲೈ 17ರಂದು ಪಟ್ನಾದ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಆತನನ್ನು ಐವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಘಟನೆ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಶರ್ಮಾ ವಿವರಿಸಿದ್ದಾರೆ.

